ವಿದ್ಯಾರ್ಥಿಗಳು ಉನ್ನತ ಗುರಿ ಇಟ್ಟುಕೊಳ್ಳಿ:ಡಾ.ಸೇಡಂ

ಬೀದರ್:ಅ.1: ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿ ಇಟ್ಟುಕೊಳ್ಳಬೇಕು ಎಂದು ರಾಜ್ಯಸಭೆ ಮಾಜಿ ಸದಸ್ಯರೂ ಆದ ವಿಕಾಸ ಅಕಾಡೆಮಿ ಮುಖ್ಯ ಸಂಯೋಜಕ ಡಾ. ಬಸವರಾಜ ಪಾಟೀಲ ಸೇಡಂ ಕಿವಿಮಾತು ಹೇಳಿದರು.

ವಿಕಾಸ ಅಕಾಡೆಮಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಹಾಗೂ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ವತಿಯಿಂದ ಇಲ್ಲಿಯ ಕರ್ನಾಟಕ ಪದವಿ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಕಲ್ಯಾಣ ಕರ್ನಾಟಕದಲ್ಲಿ ಯುವ ಜಾಗೃತಿ ಯಾತ್ರೆ’ಗೆ ಚಾಲನೆ ನೀಡಿ ಅವರು ಮಾತನಾಡಿದರು.

ಉದ್ಯೋಗಕ್ಕಾಗಿ ಯಾರ ಮುಂದೆಯೂ ಕೈಚಾಚದೆ, ಉದ್ಯೋಗದಾತರಾಗಬೇಕು. ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಶ್ರದ್ಧೆಯಿಂದ ಪರಿಶ್ರಮ ವಹಿಸಿದ್ದಲ್ಲಿ ಏನೂ ಬೇಕಾದರೂ ಸಾಧನೆ ಮಾಡಬಹುದು. ಜೀವನದ ಗುರಿ ತಲುಪಬಹುದು ಎಂದು ತಿಳಿಸಿದರು.

ಚಿಂತಕ, ಸಾಹಿತಿ ಸಿದ್ದು ಯಾಪಲಪರವಿ ಮಾತನಾಡಿ, ಕಲ್ಯಾಣ ಕರ್ನಾಟಕದ ಏಳೂ ಜಿಲ್ಲೆಗಳಲ್ಲಿ ಯುವ ಜಾಗೃತಿ ಯಾತ್ರೆ ನಡೆಯಲಿದೆ. ಯುವ ಸಬಲೀಕರಣ ಹಾಗೂ ಉದ್ಯಮಶೀಲತೆ ಬಗೆಗೆ ಒಂದು ಲಕ್ಷ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ ಎಂದು ಹೇಳಿದರು.

ಪದವಿ ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗ ಬಯಸಿ ಕಾಲ ಕಳೆಯದೆ, ಸ್ವ ಉದ್ಯೋಗ ಆರಂಭಿಸಿ, ಅನೇಕರಿಗೆ ಉದ್ಯೋಗ ಕಲ್ಪಿಸಬಹುದಾಗಿದೆ. ಯುವಕರು ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಉದ್ಯಮಕ್ಕೆ ಮಾರುಕಟ್ಟೆ ಸೃಷ್ಟಿಸಿಕೊಳ್ಳಬಹುದು ಎಂದು ತಿಳಿಸಿದರು.

ಯಾತ್ರೆ ಕಲ್ಯಾಣ ಕರ್ನಾಟಕದ ಯುವಕರನ್ನು ಸಾಧನೆಗೆ ಪ್ರೇರೇಪಿಸಲಿದೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಮಾರ್ಗದರ್ಶನ ನೀಡಲಿದೆ ಎಂದು ವಿಕಾಸ ಅಕಾಡೆಮಿ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕೆ.ಆರ್.ಇ. ಸಂಸ್ಥೆಯ ಉಪಾಧ್ಯಕ್ಷ ಬಿ.ಜಿ. ಶೆಟಕಾರ್ ಮಾತನಾಡಿದರು.

ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್, ಕೆ.ಆರ್.ಇ. ಸಂಸ್ಥೆಯ ಜಂಟಿ ಕಾರ್ಯದರ್ಶಿ ಸತೀಶ ಪಾಟೀಲ, ಸಾಹಿತಿ ಕಾವ್ಯಶ್ರೀ ಮಹಾಗಾಂವಕರ್, ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಹಂಗರಗಿ ಇದ್ದರು. ವಿಕಾಸ ಅಕಾಡೆಮಿ ಬೀದರ್ ನಗರ ಘಟಕದ ಸಂಚಾಲಕ ಕಾಮಶೆಟ್ಟಿ ಚಿಕ್ಕಬಸೆ ನಿರೂಪಿಸಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ವಂದಿಸಿದರು.