
ತುಮಕೂರು, ಆ. ೮- ವಿದ್ಯುತ್ ಅವಘಡದಿಂದಾಗಿ ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರಕರಣವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಅವರು ಇಂತಹ ಅವಘಡಗಳು ಮುಂದಿನ ದಿನಗಳಲ್ಲಿ ನಡೆಯದಂತೆ ಜಿಲ್ಲೆಯಾದ್ಯಂತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.
ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಬೆಸ್ಕಾಂ ವತಿಯಿಂದ ತಲಾ ೫ ಲಕ್ಷ ಪರಿಹಾರ ನೀಡಿ (ಒಟ್ಟು ೧೦ ಲಕ್ಷ) ವರದಿಯನ್ನು ಆಯೋಗಕ್ಕೆ ಸಲ್ಲಿಸಿರುದ್ದಾರೆ. ಹೋದ ಜೀವ ಮತ್ತೆ ತರಲಾಗದು, ಆದರೆ ಸಂಕಷ್ಟದಲ್ಲಿನ ಕುಟುಂಬಕ್ಕೆ ಇದೊಂದು ಸಣ್ಣ ಸಾಂತ್ವನವಾದೀತು ಎಂದರು.
ಜಿಲ್ಲೆಯಲ್ಲಿನ ವಿದ್ಯುತ್ ಸಂಬಂಧಿತ ಸಮಸ್ಯೆಗಳಿರುವ ಶಾಲೆಗಳ ಪಟ್ಟಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿ ಆದಷ್ಟು ಶೀಘ್ರವಾಗಿ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಿರಲಿ. ಸಂಬಂಧಿಸಿದ ಅಧಿಕಾರಿಗಳು, ಸಿಬ್ಬಂದಿಗಳು, ಹಾಗೂ ಪೋಷಕರು ಮಕ್ಕಳ ಬಗ್ಗೆ ಮತ್ತಷ್ಟು ಎಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಉಪಸ್ಥಿತರಿದ್ದರು.