ಕಲಬುರಗಿ,ಏ.15:ಕಲಬುರಗಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ 10ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಎರಡನೇ ದಿನವಾದ ಶನಿವಾರ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಮೂವರು ಅಭ್ಯರ್ಥಿಗಳಿಂದ ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ತಿಳಿಸಿದ್ದಾರೆ.
ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳ ಪೈಕಿ ಗುಲಬರ್ಗಾ ಗ್ರಾಮೀಣ ಹಾಗೂ ಗುಲಬರ್ಗಾ ದಕ್ಷಿಣ ಕ್ಷೇತ್ರದಲ್ಲಿ ನಾಮಪತ್ರಗಳು ಸಲ್ಲಿಕೆಯಾಗಿವೆ. ಇನ್ನುಳಿದ ಅಫಜಲಪುರ, ಜೇವರ್ಗಿ, ಚಿತ್ತಾಪುರ, ಸೇಡಂ, ಚಿಂಚೋಳಿ, ಗುಲಬರ್ಗಾ (ಉತ್ತರ) ಹಾಗೂ ಆಳಂದ ವಿಧಾನಸಭಾ ಕ್ಷೇತ್ರಗಳಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
43-ಗುಲಬರ್ಗಾ ಗ್ರಾಮೀಣ (ಮೀಸಲು) ವಿಧಾನಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಸವರಾಜ ಮತ್ತಿಮಡು ಅವರು 1 ನಾಮಪತ್ರ ಸಲ್ಲಿಸಿದ್ದಾರೆ. 44-ಗುಲಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಾಗಿ ಶಶಿಧರ ಬಸವರಾಜ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸಿದ್ದರಾಮ ಪಾಟೀಲ (ಸಿದ್ದು ಪಾಟೀಲ) ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.
ಇದುವರೆಗೆ ಒಟ್ಟಾರೆ 11 ಅಭ್ಯರ್ಥಿಗಳಿಂದ 11 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ.