ವಿಧಾನಸಭಾ ಚುನಾವಣೆ ಹಿನ್ನೆಲೆ ಪಕ್ಕದ ರಾಜ್ಯಗಳಿಗೆ ರಾಜ್ಯದ ಪೋಲಿಸರ ನಿಯೋಜನೆ: ಬೊಮ್ಮಾಯಿ

ಕಲಬುರಗಿ:ಮಾ.30:ತಮಿಳ್ನಾಡು ಹಾಗೂ ಕೇರಳ್ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಕರ್ನಾಟಕದ ಪೋಲಿಸರನ್ನು ನಿಯೋಜಿಸಲಾಗಿದೆ ಎಂದು ರಾಜ್ಯದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು.
ಮಂಗಳವಾರ ಬಸವಕಲ್ಯಾಣಕ್ಕೆ ತೆರಳಲು ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ತಮಿಳ್ನಾಡು ಹಾಗೂ ಕೇರಳ್ ರಾಜ್ಯಗಳ ವಿಧಾನಸಭಾ ಚುನಾವಣೆಗೆ ರಾಜ್ಯ ಪೋಲಿಸ್ ಪಡೆ ತೆರಳಲಿದೆ ಎಂದರು.
ಕಾಂಗ್ರೆಸ್ ಪಕ್ಷದ ಆಡಳಿತಕ್ಕಿಂತಲೂ ಸದ್ಯ ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಅತ್ಯುತ್ತಮವಾಗಿದೆ. ಅವರ ಆಡಳಿತದಲ್ಲಿ ಕೊಲೆ, ಸುಲಿಗೆ, ಗಾಂಜಾ ಸಾಗಾಟ ಎಷ್ಟರ ಮಟ್ಟಿಗೆ ನಡೆಯುತ್ತಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ಸಿನವರು ವಿನಾಕಾರಣ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ 52 ಪೋಲಿಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸುವ ಆಲೋಚನೆ ಇದೆ. ಶೀಘ್ರದಲ್ಲಿಯೇ ಮೇಲ್ದರ್ಜೆಗೇರಿಸಲಾಗುವುದು ಎಂದು ಅವರು ಹೇಳಿದರು.