
ವಿಜಯಪುರ, ಏ.06: ಕಳೆದ ಚುನಾವಣೆಗಳಲ್ಲಿ ಶೇ.60ಕ್ಕಿಂತಲೂ ಕಡಿಮೆ ಮತದಾನವಾಗಿರುವ 298 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಗಮನ ಹರಿಸಿ, ಸ್ವೀಪ್ ಸಮಿತಿ ವತಿಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಿಇಓ ಕಚೇರಿ ಸಭಾಂಗಣದಲ್ಲಿ ಜರುಗಿದ ಸ್ವೀಪ್ ಸಮಿತಿ ಸಭೆ ನಡೆಸಿದ ಅವರು, ಗ್ರಾಮೀಣ, ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದೆಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಚ್ಚಿನ ಮತದಾನಕ್ಕೆ ಕ್ರಮ ವಹಿಸಬೇಕು. ಕಳೆದ ಚುನಾವಣೆಗಳಲ್ಲಿ ಅತಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳ ಮುಂದೆ ಚಿತ್ರಗಳನ್ನು ಬಿಡಿಸುವ ಮೂಲಕ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾರರಲ್ಲಿ ಕಡ್ಡಾಯ ಮತದಾನಕ್ಕೆ ಜಾಗೃತಿ ಮೂಡಿಸುವಂತೆ ಅವರು ಸಲಹೆ ನೀಡಿದರು.
ಬಿಎಜಿ ಹಾಗೂ ಜಾಗೃತ್ ಕ್ಲಬ್ ಸದಸ್ಯರು ಮತಗಟ್ಟೆ ವ್ಯಾಪ್ತಿಯ ಪ್ರತಿ ಮನೆ-ಮನೆಗೆ ಭೇಟಿ ನೀಡಿ ಮತದಾರರಲ್ಲಿ ಅರಿವು ಮೂಡಿಸಬೇಕು. ಈ ಅರಿವು ಹಾಗೂ ಜಾಗೃತಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಸ್ವಿಪ್ ಸಮಿತಿ ಸದಸ್ಯರುಗಳಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಭಾಗವಹಿಸಿ ಪರಿಣಾಮಕಾರಿ ಜಾಗೃತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಅವರು ಸೂಚನೆ ನೀಡಿದ ಅವರು ಜಾಗೃತಿ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರು ಮತದಾನ ಕುರಿತ ಪ್ರತಿಜ್ಞಾ ಸ್ವೀಕರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬಿ.ವೈ.ಸುರಖೋಡ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯರಗಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಕೆ.ಕೆ.ಚವ್ಹಾಣ, ಜಿ.ಪಂ.ಯೋಜನಾ ಉಪ ನಿರ್ದೇಶಕ ಎ.ಬಿ.ಅಲ್ಲಾಪುರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿರಹಟ್ಟಿಮಠ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಉಪಸ್ಥಿತರಿದ್ದರು.