ವಿಧಾನ ಪರಿಷತ್ ಚುನಾವಣೆ: ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ

ಪಾರದರ್ಶಕ, ನ್ಯಾಯ ಸಮ್ಮತ ಚುನಾವಣೆ – ಜಿಲ್ಲಾಧಿಕಾರಿ
ರಾಯಚೂರು,ಡಿ.೦೧- ಕರ್ನಾಟಕ ವಿಧಾನ ಪರಿಷತ್ ರಾಯಚೂರು, ಕೊಪ್ಪಳ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಮುಖಂಡರು ಮತ್ತು ಪ್ರತಿನಿಧಿಗಳೊಂದಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್ ಅವರು ಕಚೇರಿಯಲ್ಲಿ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯನ್ನು ಮುಕ್ತ ಮತ್ತು ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ಈಗಾಗಲೇ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಸಹಕರಿಸುವಂತೆ ರಾಜಕೀಯ ಪಕ್ಷಗಳ ಮುಖಂಡರಲ್ಲಿ ಕೋರಿದರು.
ಮತದಾರರು ಅತ್ಯಂತ ನಿರ್ಭೀತಿಯಿದ ಮತದಾನ ಕೇಂದ್ರಕ್ಕೆ ಬಂದು ಮತದಾನದ ಮಾಡುವ ನಿಟ್ಟಿನಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅತ್ಯಂತ ಸುಲಲಿತವಾಗಿ ಯಾವುದೇ ರೀತಿಯ ಸಮಸ್ಯೆಗಳಿಗೆ ಅಸ್ಪದ ನೀಡದಂತೆ ಚುನಾವಣೆ ನಡೆಸುವ ನಿಟ್ಟಿನಲ್ಲಿ ಸಿಬ್ಬಂದಿಗಳಿಗೆ ತರಬೇತಿ, ಮತಗಟ್ಟೆಗಳಿಗೆ ಅಗತ್ಯ ಸೌಕರ್ಯ ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಪ್ರತಿ ಗ್ರಾಮ ಪಂಚಾಯತಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಚುನಾವಣೆಯ ಮತದಾನಕ್ಕೆ ಸಂಬಂಧಿಸಿದಂತೆ ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳಲಾಗಿದ್ದು, ಪ್ರಾಶಸ್ತ್ಯದ ಮತದ ಬಗ್ಗೆಯೂ ಅರಿವು ಮೂಡಿಸಲಾಗುವುದು ಅಲ್ಲದೆ ರಾಜ್ಯ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಬೆಂಬಲ ನೀಡಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಚುನಾವಣೆ ಶಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ರಾಜಕೀಯ ಪಕ್ಷದ ಮುಖಂಡರು ಸಭೆಯ ಇದ್ದರು.