(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು, ಜು. ೧೭- ದೇಶದ ವಿಪಕ್ಷಗಳಿಗೆ ದೇಶ ಕಟ್ಟುವ ಚಿಂತನೆ ಇಲ್ಲ. ಹೇಗಾದರೂ ಮಾಡಿ ಮತ್ತೆ ಅಧಿಕಾರಕ್ಕೆ ಬರಬೇಕು. ಪ್ರಧಾನಿ ಮೋದಿಯವರನ್ನು ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಬೇಕು ಎಂಬುದಷ್ಟೇ ಇವರ ಕಾರ್ಯಸೂಚಿ ಎಂದು ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮಹಾನಗರದಲ್ಲಿ ದೇಶದ ಎಲ್ಲ ವಿಪಕ್ಷಗಳು ಒಗ್ಗೂಡಿ ಸಭೆ ಮಾಡುತ್ತಿವೆ. ವಿಪಕ್ಷಗಳ ಪರಿಸ್ಥಿತಿ ಹೇಗಿದೆ ಎಂದರೆ ಎತ್ತು ಏರಿಗೆಳೆದರೆ, ಕೋಣ ನೀರಿಗೆಳೆಯಿತು ಎಂಬಂತಿದೆ ಎಂದು ವ್ಯಂಗ್ಯವಾಡಿದರು.ಪ್ರಧಾನಿ ಮೋದಿಯವರ ನಾಯಕತ್ವವನ್ನು ಇಡೀ ಜಗತ್ತೇ ಕೊಂಡಾಡುತ್ತಿದೆ. ಹೀಗಿರುವಾಗ ವಿಪಕ್ಷಗಳು ಸೇರಿ ಮೋದಿಯವರನ್ನು ಮಣಿಸಲು ಆಗದು. ಮೂರನೇ ಬಾರಿ ನರೇಂದ್ರ ಮೋದಿಯವರು ಪ್ರಧಾನಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.ವಿಪಕ್ಷಗಳು ಒಗ್ಗೂಡಿ ಯಾವುದೇ ಸಭೆ ಮಾಡಿದರೂ ೨೦೨೪ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ. ಪ್ರಧಾನಿ ಮೋದಿಯವರು ಮತ್ತೆ ಪ್ರಧಾನಿಯಾಗುವುದು ನಿಶ್ಚಿತ ಎಂದರು.ಮೋದಿಯವರು ಪ್ರಧಾನಿಯಾಗುವುದನ್ನು ತಡೆಯುವ ಒನ್‌ಲೈನ್ ಅಜೆಂಡಾ ಇಟ್ಟುಕೊಂಡು ಮತ್ತೆ ಅಧಿಕಾರಕ್ಕೆ ಬರಬೇಕು ಎನ್ನುವ ವಿಪಕ್ಷಗಳ ಕನಸು ನನಸಾಗಲ್ಲ. ಜನಕ್ಕೆ ಎಲ್ಲವೂ ಗೊತ್ತಿದೆ ಎಂದರು.
ಮೈತ್ರಿ ಗೊತ್ತಿಲ್ಲ
ರಾಜ್ಯದಲ್ಲಿ ಬಿಜೆಪಿ ಪಕ್ಷ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುತ್ತಿದೆ ಎಂಬ ವಿಚಾರ ನನಗೆ ಗೊತ್ತಿಲ್ಲ. ಮಾಧ್ಯಮದಲ್ಲಿ ನಾನು ನೋಡಿದ್ದೇನೆ. ಪಕ್ಷದ ಹಿತದೃಷ್ಠಿಯಿಂದ ಹೈಕಮಾಂಡ್ ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ನಾವು ಬದ್ಧ ಎಂದು ಅವರು ತಿಳಿಸಿದರು.
ಮಾಜಿ ಸಚಿವ ವಿ. ಸೋಮಣ್ಣ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸೋಮಣ್ಣನವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಲಿ, ಇದಕ್ಕೆ ನನ್ನ ಬೆಂಬಲವೂ ಇದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.