ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: ಆರೋಪಿ ವಶಕ್ಕೆ


ಮಂಗಳೂರು, ಎ.೧೦- ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನೋರ್ವ ಅಕ್ರಮವಾಗಿ ೩೦.೭೩ ಲಕ್ಷ ರೂ. ಮೌಲ್ಯದ ಚಿನ್ನವನ್ನು ಸಾಗಾಟ ಮಾಡಿದ್ದ ಎನ್ನಲಾಗಿದ್ದು, ಮಂಗಳೂರು ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಕೇರಳ ಆಲಂಪಾಡಿ ನಿವಾಸಿ ಇಬ್ರಾಹಿಂ ಪನಾಲಂ ಅಬ್ದುಲ್ಲ ಎಂಬಾತ ೬೪೭ ಗ್ರಾಂ ತೂಕದ ಚಿನ್ನದ ಗಟ್ಟಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುಬೈಯಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಮಂಗಳೂರು ಏರ್ ಪೋರ್ಟ್ ಗೆ ಬಂದಿಳಿದ ಆತನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಈತನ ಬಳಿ ೩೦.೭೩ ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.