
ಬೆಂಗಳೂರು,ಮೇ೨೪:ಬಿಜೆಪಿ ಸರ್ಕಾರ ಜಾರಿ ಮಾಡಿರುವ ಗೋಹತ್ಯೆ ನಿಷೇಧ ಕಾಯ್ದೆ ಮತಾಂತರ ಕಾಯ್ದೆ ಸೇರಿದಂತೆ ಹಲವು ಜನ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದು ಪರಿಷ್ಕರಣೆ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದರು.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲವು ಜನವಿರೋಧಿ ಕಾಯ್ದೆಗಳನ್ನು ಜಾರಿ ಮಾಡಲಾಗಿದೆ. ಈ ಜನ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಲಾಗುವುದು ಎಂದರು.
ಈ ಹಿಂದೆ ವಿರೋಧ ಪಕ್ಷವಾದ ಕಾಂಗ್ರೆಸ್‌ನ ನಿಲುವಿಗೆ ವಿರೋಧವಾಗಿ ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ಹಲವು ಕಾಯ್ದೆಗಳು ಜಾರಿಯಾಗಿವೆ. ಈ ಕಾಯ್ದೆಗಳನ್ನು ವಾಪಸ್ ಪಡೆದು ಪರಿಷ್ಕರಣೆ ಮಾಡುವುದಾಗಿಯೂ ಅವರು ಹೇಳಿದರು.
ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಲೋಪಗಳಾಗಿವೆ. ಇದನ್ನು ಮುಂದಿನ ದಿನಗಳಲ್ಲಿ ಪರಿಷ್ಕರಿಸಲಾಗುವುದು ಎಂದು ಪ್ರಿಯಾಂಕ ಖರ್ಗೆ ಹೇಳಿದರು.
ಕನ್ನಡ ನಾಡಿನ ಜನರಿಗೆ ವಿರುದ್ಧವಾದ ಯಾವುದೇ ಕಾಯ್ದೆಗಳಿದ್ದರೂ ಅವುಗಳನ್ನು ವಾಪಸ್ ಪಡೆಯುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.
ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು ಎಂಬುದು ನಮ್ಮ ಉದ್ದೇಶ. ಬಿಜೆಪಿಯವರು ಪಠ್ಯ ಪರಿಷ್ಕರಣೆಯಲ್ಲಿ ಇತಿಹಾಸವನ್ನು ತಿರುಚಿದ್ದಾರೆ. ಹಾಗೆಯೇ ಉರಿಗೌಡ-ನಂಜೇಗೌಡ ಅವರಂತಹವರನ್ನು ಸೃಷ್ಠಿಸಿದ್ದಾರೆ. ಈ ಎಲ್ಲವನ್ನು ಸರಿಪಡಿಸುವ ಕೆಲಸವನ್ನು ನಾವು ಮಾಡುತ್ತೇವೆ. ಮಕ್ಕಳಿಗೆ ವೈಜ್ಞಾನಿಕವಾಗಿ ಕಲಿಯುವ ವಾತಾವರಣವನ್ನು ರೂಪಿಸಲಾಗುವುದು ಎಂದರು.
ಹಗರಣಗಳ ತನಿಖೆ
ಈಗಾಗಲೇ ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ನಡೆಸುವುದಾಗಿ ಕಾಂಗ್ರೆಸ್ ನಾಯಕರುಗಳು ಹೇಳಿಕೆ ನೀಡಿರುವ ಬೆನ್ನಲ್ಲೆ ಸಚಿವ ಪ್ರಿಯಾಂಕ ಖರ್ಗೆಯವರು ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆಗಾಗಿ ಚಕ್ರತೀರ್ಥ ನೇತೃತ್ವದಲ್ಲಿ ಸಮಿತಿಯನ್ನು ರಚನೆ ಮಾಡಿತ್ತು, ಟಿಪ್ಪು ಸೇರಿದಂತೆ ಕೆಲವೊಂದು ಪ್ರಮುಖ ವಿಷಯಗಳಿಗೆ ಕತ್ತರಿ ಹಾಕುವ ಕುರಿತು ಸಮಿತಿ ಶಿಫಾರಸ್ಸು ಮಾಡಿತ್ತು. ಈ ಸಮಿತಿಯ ಶಿಫಾರಸ್ಸಿಗೆ ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದವು.
ಬಿಜೆಪಿ ಸರ್ಕಾರ ಒತ್ತಡಕ್ಕೆ ಮಣಿದು ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಮಾಡಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಕನ್ನಡ ಸಾರಸ್ವತ ಲೋಕದಿಂದಲೂ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಈಗಾಗಲೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆ ನಡೆಸುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಿಸಿದೆ. ಈಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ವಿವಾದಾತ್ಮಕ ಕಾಯ್ದೆಗಳನ್ನು ಪರಿಷ್ಕರಣೆ ಮಾಡಿ ಮರುಜಾರಿಗೆ ಮುಂದಾಗಿದೆ.
ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ತನಿಖೆ ನಡೆಸುವ ಪ್ರಸ್ತಾಪಕ್ಕೆ ಬಿಜೆಪಿ ತಿರುಗೇಟು ನೀಡಿದ್ದು, ದಾಖಲೆಗಳನ್ನು ಬಹಿರಂಗಪಡಿಸಿ ತನಿಖೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.