ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ

ಗದಗ,ಜು.31: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಮುಖ್ಯಸ್ಥರಿಗೆ ವಹಿಸಲಾದ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸುವ ಮೂಲಕ ಉತ್ತಮ ಕಾರ್ಯ ನಿರ್ವಹಣೆ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಮೊಹಮ್ಮದ್ ಮೊಹಸಿನ್ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇಲಾಖೆ ಮುಖ್ಯಸ್ಥರು ತಮ್ಮ ಇಲಾಖೆಗೆ ಸಂಬಂಧಿಸಿದ ಕರ್ತವ್ಯಗಳ ಸರಿಯಾದ ಅನುಷ್ಟಾನ ಹಾಗೂ ಗುರಿ ಸಾಧನೆಗೆ ಮುಂದಾಗಬೇಕು.
ಪ್ರಕೃತಿ ವಿಕೋಪ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಜಿಲ್ಲೆಯಲ್ಲಿನ ವಿವಿಧ ಇಲಾಖಾಧಿಕಾರಿಗಳು ಸಮರ್ಥವಾಗಿ ಸಮನ್ವಯದಿಂದ ಎದುರಿಸಬೇಕು.ಮಳೆ ನೀರು ಸರಾಗವಾಗಿ ಮುಂದೆ ಸಾಗಲು ಚರಂಡಿ , ರಾಜಕಾಲುವೆಗಳಲ್ಲಿನ ಕಸ ಸ್ವಚ್ಛಗೊಳಿಸುವ ಮೂಲಕ ಮಳೆ ನೀರು ಮನೆಗಳಿಗೆ ನುಗ್ಗುವುದನ್ನು ನಿಯಂತ್ರಿಸಬೇಕು ಎಂದರು.
ಪ್ರವಾಹದಿಂದ ಹಾನಿಗೊಳಗಾದರಸ್ತೆ, ಮೂಲಸೌಕರ್ಯ ದುರಸ್ತಿಗಾಗಿ ತಕ್ಷಣ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಅನುಮೋದನೆಗೆ ಸಲ್ಲಿಸಬೇಕು. ಮನೆ ಹಾನಿ ಹಾಗೂ ಬೆಳೆ ಹಾನಿಗೆ ಅಧಿಕಾರಿಗಳು ಸ್ಪಂದಿಸಿ ನಿಖರ ಸಮೀಕ್ಷೆ ಕೈಗೊಂಡು ಪರಿಹಾರ ದೊರಕಿಸಲು ಶೀಘ್ರ ಕ್ರಮ ವಹಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಜಿ.ಪಂ. ಮುಖ್ಯ ಯೋಜನಾಧಿಕಾರಿ ವಾಗೀಶ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾದಿಕಾರಿ ಡಾ. ಜಗದೀಶ್ ನುಚ್ಚಿನ್ , ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ, ಡಿಡಿಎಲ್ ಆರ್ ರವಿಕುಮಾರ್, ತಾಲೂಕಿನ ತಹಶೀಲ್ದಾರರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲಕುಮಾರ್ ಜಾಬಗೌಡ್ರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.