ವಿವಿಧ ಕಾಮಗಾರಿಗಳಿಗೆ ಶಾಸಕ ಚರಂತಿಮಠ ಚಾಲನೆ

ಬಾಗಲಕೋಟೆ : ಏ 5 : ನವನಗರದಲ್ಲಿ ಒಟ್ಟು 6.95 ಕೋಟಿ ರೂ.ಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಪ್ರಧಾನಮಂತ್ರಿ ಜನ ವಿಕಾಸ ಯೋಜನೆಯಡಿಯಲ್ಲಿ 2.35 ಕೋಟಿ ರೂ.ಗಳ ವೆಚ್ಚದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆಯ ಕಟ್ಟಡ ನಿರ್ಮಾಣ, 1.10 ಕೋಟಿ ರೂ.ಗಳ ವೆಚ್ಚದಲ್ಲಿ ಪುನರ್ವಸತಿ ಪುನ್ ನಿರ್ಮಾಣದ ಕೃಷ್ಣಾ ಮೇಲ್ದಂಡೆ ಯೋಜನೆ ಇಲಾಖೆಯ ಮಹಾವ್ಯವಸ್ಥಾಪಕರ ಕಚೇರಿಯ ನೆಲ ಮಹಡಿ ನವೀಕರಣ ಮತ್ತು ಮೊದಲನೇ ಮಹಡಿಯ ಕಟ್ಟಡ ನಿರ್ಮಾಣ, ಡಿ.ಎಂ.ಎಫ್ ನಿಯಮದಡಿಯಲ್ಲಿ ಮಂಜೂರಾದ ನವನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ 1 ಕೋಟಿ ರೂ.ಗಳ ವೆಚ್ಚದಲ್ಲಿ ವಾಚನಾಲಯ, ಆರ್ಟ ಮತ್ತು ಕ್ರಾಪ್ಟ್ ಕೊಠಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಪಂಚಾಯತ ರಾಜ್ ಸಂಸ್ಥೆಗಳ ಲೆಕ್ಕಶಿರ್ಷಿಕೆಯಡಿ ಮಂಜೂರಾದ 2.50 ಕೋಟಿ ರೂ.ಗಳ ವೆಚ್ಚದಲ್ಲಿ ಬಾಗಲಕೋಟೆ ತಾಲೂಕಾ ಪಂಚಾಯತ ಕಟ್ಟಡದ ಮೊದಲನೇ ಮಹಡಿ ಹಾಗೂ ಎರಡನೇ ಮಹಡಿ ನಿರ್ಮಾಣ ಮತ್ತು ನವೀಕರಣ ಕಾಮಗಾರಿಗಳಿಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೀರಣ್ಣ ಚರಂತಿಮಠ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ ಅವರಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಉಪಾದ್ಯಕ್ಷ ಬಸವರಾಜ ಅವರಾದಿ, ತಾ.ಪಂ ಅಧ್ಯಕ್ಷ ಚನ್ನನಗೌಡರ ಪರನಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಎಂ.ಎನ್.ಮೇಲಿನಮನಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ, ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್.ವಾಯ್.ಬಸರಿಗಿಡದ ಸೇರಿದಂತೆ ಇತರರು ಉಪಸ್ಥಿತರಿದ್ದರು.