ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಸಿಇಓ ರಾಹುಲ್ ಸಿಂಧೆ

ವಿಜಯಪುರ:ಜ.21: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಶುಕ್ರವಾರ ತಿಕೊಟಾ ಮತ್ತು ಬಬಲೇಶ್ವರ ತಾಲೂಕಾ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯತಿಯ ಅತಾಲಟ್ಟಿ ಐಖಿ ಗ್ರಾಮಕ್ಕೆ ಭೇಟಿ ನೀಡಿ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆ-ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳಿಗೆ ಅಳವಡಿಸಿದ ಪೈಪ್ ಲೈನ್ ಕಾಮಗಾರಿಗಳಿಗೆ ಉತ್ತಮ ಗುಣಮಟ್ಟದ ಪೈಪ್ ಗಳನ್ನು ಅಳವಡಿಕೆ ಮಾಡಬೇಕು, ಕಾರ್ಯಾತ್ಮಕ ನಳಗಳಿಗೆ ಉತ್ತಮ ಗುಣಮಟ್ಟದ ನಳಗಳನ್ನು ಜೋಡಣೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಅತಾಲಟ್ಟಿ ಗ್ರಾಮದ ಸರಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲಾ ಅಡುಗೆ ಕೋಣೆ ಹಾಗೂ ತರಗತಿ ಕೊಠಡಿಗಳನ್ನು ಪರಿಶೀಲನೆ ಮಾಡಿ, ಪ್ರತಿ ಕೊಠಡಿಗಳಲ್ಲಿ ವಿದ್ಯುತ್ ದೀಪದ ವ್ಯವಸ್ಥೆ ಮಾಡಬೇಕೆಂದು ಅಲ್ಲಿನ ಮುಖ್ಯ ಶಿಕ್ಷಕರಿಗೆ ಸೂಚಿಸಿದರು.

ಮುಂದುವರೆದು, ಬಬಲೇಶ್ವರ ತಾಲೂಕಿನ ಕಣಮುಚನಾಳ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಅಲ್ಲಿನ ಶಿಥಿಲಾವಸ್ಥೆಯಲ್ಲಿರುವ ಕೊಠಡಿಯನ್ನು ಸಂಪೂರ್ಣ ನೆಲಸಮ ಮಾಡಿ ಹೊಸ ಕಟ್ಟಡವನ್ನು ನಿರ್ಮಾಣ ಮಾಡಲು ಮತ್ತು ಸದರಿ ಶಾಲೆಗೆ ಜಲಜೀವನ್ ಮಿಷನ್ ಯೋಜನೆಯಡಿ ಕಾರ್ಯಾತ್ಮಕ ನಳ ಸಂಪರ್ಕ ಒದಗಿಸಲು ಪಂಚಾಯತ್ ರಾಜ್ ಇಲಾಖೆಯ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಶಾಲಾ ಮಕ್ಕಳಿಗೆ ತಯಾರಿಸುವ ಮಧ್ಯಾಹ್ನದ ಬಿಸಿಯೂಟ ಅಡುಗೆ ಕೋಣೆಗೆ ಭೇಟಿ ಮಾಡಿ ಆಹಾರ ಪರಿಶೀಲನೆ ಮಾಡಿದರು. ಸದರಿ ಶಾಲೆಯ ಮುಂಭಾಗದಲ್ಲಿ ವ್ಯವಸ್ಥಿತ ಚರಂಡಿ ನಿರ್ಮಾಣ ಮಾಡಲು ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿ ಜಿಲ್ಲಾ ಪಂಚಾಯತಿಗೆ ಅನುಮೋದನೆಗಾಗಿ ಸಲ್ಲಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು. ಇದೇ ವೇಳೆ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಖುದ್ದಾಗಿ ನಾಣ್ಯವನ್ನು ಹಾಕುವ ಮೂಲಕ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಜಲಜೀವನ್ ಮಿಷನ್ ಯೋಜನೆಯಡಿ ಕಾರ್ಯಾತ್ಮಕ ನಳಸಂಪರ್ಕ ನೀಡುವ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳಿಗೆ ಭೇಟಿ ನೀಡಿ ಪೈಪ್ಲೈನ್ ಅಳವಡಿಕೆ ಮಾಡಿರುವ ಕಾಮಗಾರಿಗಳಿಗೆ ಉತ್ತಮ ಗುಣಮಟ್ಟದ ಪೈಪ್ ಗಳನ್ನು ಅಳವಡಿಕೆ ಮಾಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಧನ್ಯಾಳ ಗ್ರಾಮದ ಜಲ ಜೀವನ್ ಮಿಷನ್ ಯೋಜನಯಡಿ ಪ್ರತಿ ಮನೆ-ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳನ್ನು ಪರಿಶೀಲಿಸಿದರು. ಪ್ರಗತಿ ಹಂತದಲ್ಲಿರುವ ಗ್ರಾಮದ ನೀರಿನ ಟ್ಯಾಂಕ್ ಕಾಮಗಾರಿಯನ್ನು ಪರಿಶೀಲಿಸಿ ಉತ್ತಮ ಗುಣಮಟ್ಟದ ಸಾಮಗ್ರಿಗಳನ್ನು ಉಪಯೋಗಿಸಿ ನೀರಿನ ಟ್ಯಾಂಕ್ ಕಾಮಗಾರಿಯನ್ನು ನಿರ್ಮಾಣ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ನೀರಿನ ಟ್ಯಾಂಕ್ ಕಾಮಗಾರಿಯನ್ನು ಪರಿಶೀಲಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಪರಿಶೀಲಿಸಿದರು ಹಾಗೂ ಕೇಂದ್ರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದರು. ಸಾರ್ವಜನಿಕ ಗ್ರಂಥಾಲಯಕ್ಕೆ ಸಿಬ್ಬಂದಿಯನ್ನು ಶೀಘ್ರದಲ್ಲಿ ನೇಮಕ ಮಾಡಲಾಗುವುದು ಎಂದು ತಿಳಿಸಿದರು. ಅಕ್ಕ-ಪಕ್ಕ ಹೊಂದಿಕೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಾರ್ವಜನಿಕ ಗ್ರಂಥಾಲಯಗಳ ಸುತ್ತಲೂ ಕಾಂಪೌಂಡ್, ಸಾರ್ವಜನಿಕರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಹಾಗೂ ಉದ್ಯಾನವನ ನಿರ್ಮಾಣ ಮಾಡಲು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಮುಂದುವರೆದು ತಾಜಪುರ ಊ. ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆ-ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳಿಗೆ ಭೇಟಿ ನೀಡಿ ಪೈಪ್ ಲೈನ್ ಅಳವಡಿಕೆ ಹಾಗೂ ನೀರು ಪ್ರತಿ ದಿನ ಬರುತ್ತದೆಯೋ ಇಲ್ಲವೋ ಎಂಬುದನ್ನು ಸಾರ್ವಜನಿಕರೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಬಬಲೇಶ್ವರ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಜೆ. ಎಸ್ ಪಠಾಣ, ತಿಕೋಟಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪೂರ, ಪಂಚಾಯತ್ ರಾಜ್ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಎಸ್.ಒ.ಸಾರವಾಡ, ಬಬಲೇಶ್ವರ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರಾ.ಉ) ಶ್ರೀಮತಿ. ಭಾರತಿ ಹಿರೇಮಠ, ತಿಕೋಟಾ ತಾಲೂಕಿನ ಸಹಾಯಕ ನಿರ್ದೇಶಕಾರು (ಗ್ರಾ.ಉ) ಎಮ್. ಬಿ. ಮನಗೂಳಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜಂಗಮ ಶೆಟ್ಟಿ, ಜಿಲ್ಲಾ ಪಂಚಾಯತಿಯ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯಾಧಿಕಾರಿಗಳಾದ ಪೃಥ್ವಿರಾಜ ಪಾಟೀಲ, ತೊರವಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುರೇಶ ಕಳ್ಳಿಮನಿ, ನಿಡೋಣಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಿ. ಎಸ್. ಮುಜಾವರ, ಕೋಟ್ಯಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂತೋಷ ಬಿರಾದಾರ ಉಪಸ್ಥಿತರಿದ್ದರು.