
ರಾಯಚೂರ, ಸೆ ೯: ಹಳೆ ಪಿಂಚಣಿ ಮರುಸ್ಥಾಪಿಸುವುದು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ನವೆಂಬರ್ ೩ ರಂದು ದೆಹಲಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಾರ್ಯಧ್ಯಕ್ಷ ಎನ್. ಶೋಭಾ ಲೋಕನಾಗಣ್ಣ ಹೇಳಿದರು.
ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ,
ಕೇಂದ್ರ ಸರ್ಕಾರದ ನೀತಿಗಳಿಂದ ದಿನಬಳಕೆಯ ವಸ್ತುಗಳ ಬೆಲೆ ಹೆಚ್ಚಳಗೊಂಡಿದೆ. ಬೆಲೆ ಹೆಚ್ಚಳದಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಕೇಂದ್ರದ ನೀತಿ ಕಾರ್ಪೋರೇಟ್ ಕಂಪೆನಿಗಳಿಗೆ ಸಹಕಾರಿಯಾಗಿದೆ. ಸಾರ್ವಜನಿಕ ಉದ್ದಿಮೆಗಳಾದ ರೈಲ್ವೆ, ವಿದ್ಯುಚ್ಛಕ್ತಿ, ವಿಮಾ ರಂಗ, ಬ್ಯಾಂಕ್ ಮತ್ತು ದೂರಸಂಪರ್ಕ, ವಿಮಾನ ವಲಯ, ಬಂದರುಗಳು ಮತ್ತು ಹೆದ್ದಾರಿ ವಲಯಗಳನ್ನು ಖಾಸಗಿಯವರಿಗೆ ವಹಿಸುತ್ತಿರುವುದರಿಂದ ಉದ್ಯೋಗ ಕೊರತೆ ಸೃಷ್ಟಿಯಾಗಿದೆ ಎಂದು ಆರೋಪಿಸಿದರು.
೨೦೦೬ರ ನೂತರ ಪಿಂಚಣಿ ಪದ್ದತಿಯನ್ನು ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆಯನ್ನು ಮರು ಸ್ಥಾಪಿಸಬೇಕಿದೆ ಎಂದ ಅವರು, ಸರ್ಕಾರಿ ಇಲಾಖೆಗಳು, ನಿಗಮ ಮಂಡಳಿಗಳು, ಸಾರ್ವಜನಿಕ ಉದ್ದಿಮೆಗಳಲ್ಲಿ ಖಾಲಿ ಇರುವ ೬೦ ಲಕ್ಷ ಹುದ್ದೆಗಳನ್ನು ಭರ್ತಿ ಮಾಡದೇ ಕಡಿಮೆ ವೇತನದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ದುಡಿಸಿಕೊಳ್ಳುವ ಮೂಲಕ ಕಾರ್ಮಿಕರನ್ನು ಹಾಗೂ ಸಿಬ್ಬಂದಿಗಳನ್ನು ಶೋಷಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಆಹಾರ, ಆರೋಗ್ಯ ಸೇರಿದಂತೆ ಹತ್ತಾರು ಇಲಾಖೆಗಳ ಸೇವೆಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ತನ್ನ ಚಿಂತನೆಯನ್ನು ಬದಲಿಸಿಕೊಳ್ಳಬೇಕು ಎಂದ ಅವರು,ಈ ಎಲ್ಲ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನವೆಂಬರ್ ೩ ರಂದು ದೆಹಲಿ ಚಲೋ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಹದೇವಯ್ಯ ಮಠಪತಿ, ತಾಯರಾಜ ಮರ್ಚೆಂಟಾಳ್, ಅಮರೇಶಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.