ವಿವಿಧ ಸ್ಥಳಗಳಿಗೆ ಜಿಲ್ಲಾಧಿಕಾರಿಗಳ ಭೇಟಿ


ಗದಗ, ಮೇ.2: ಕೋವಿಡ್ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲ್ಲಿ ರಾಜ್ಯ ಸರ್ಕಾರವು ಕಠಿಣ ಕ್ರಮಗಳನ್ನು ಒಳಗೊಂಡ ಮಾರ್ಗಸೂಚಿಗಳನ್ನು ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಪ್ರತಿ ದಿನ ಮುಂಜಾನೆ 6 ರಿಂದ 10 ಗಂಟೆಯವರೆಗೆ ದಿನಸಿ, ಹಣ್ಣು, ಹಾಲು, ತರಕಾರಿ ಸೇರಿದಂತೆ ಅವಶ್ಯಕ ವಸ್ತುಗಳ ಮಾರಾಟಕ್ಕೆ ಅನುಮತಿಸಲಾಗಿದ್ದು ಈ ಹಿನ್ನಲೆಯಲ್ಲಿ ಜನದಟ್ಟಣೆ ನಿಯಂತ್ರಿಸಲು ಕೈಗೊಳ್ಳಲಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಅವಳಿ ನಗರ ಹಾಗೂ ಮುಂಡರಗಿಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರೀಶಿಲಿಸಿದರು.
ಅವಳಿ ನಗರದ ಕೆ.ಎಚ್.ಪಾಟೀಲ ವೃತ್ತ, ಬಸವೇಶ್ವರ ವೃತ್ತ, ಗಾಂಧಿ ಸರ್ಕಲ್ ಸೇರಿದಂತೆ ಬೆಟಗೇರಿ ತರಕಾರಿ ಮಾರುಕಟ್ಟೆ ಹಾಗೂ ಮುಂಡರಗಿಗೆ ಭೇಟಿ ನೀಡಿ ಪರೀಶಿಲಿಸಿದರು. ಕರೊನಾ ಸೋಂಕು ನಿಯಂತ್ರಣಕ್ಕೆ ಜಾರಿ ಮಾಡಲಾದ ಮಾರ್ಗಸೂಚಿಗಳನ್ನು ಸರಿಯಾಗಿ ಅನುಷ್ಠಾನ ಮಾಡಬೇಕು. ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾರುಕಟ್ಟೆಗಳಲ್ಲಿ ಹೆಚ್ಚಿನ ಜನದಟ್ಟಣೆ ಆಗದಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನಿಗಾವಹಿಸಬೇಕು. ಮಾಸ್ಕ ಧರಿಸದವರ ಹಾಗೂ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸಲು ಹಾಗೂ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಜಿಲ್ಲಾಧಿಕಾರಿಗಳಿಗೆ ಸಾಥ್ ನೀಡಿದರು. ಮುಂಡರಗಿ ತಹಶೀಲ್ದಾರ ಹಾಗೂ ಇತರೆ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.