ವಿವೇಕಾನಂದರ ತತ್ವ ಆದರ್ಶವನ್ನು ಅಳವಡಿಸಿಕೊಳ್ಳಿ

ದೇವನಹಳ್ಳಿ ಜ೧೩-ಸ್ವಾಮಿ ವಿವೇಕಾನಂದರ ತತ್ವ, ಆದರ್ಶಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಂಡು, ಸಮಯದ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಗುರಿಯನ್ನು ಸಾಧಿಸಿ, ದೇಶದ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ವಿ.ಪ್ರಸಾದ್ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೌಶಲ್ಯಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳ ಸಹಯೋಗದೊಂದಿಗೆ ದೇವನಹಳ್ಳಿ ಟೌನ್‌ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿಂದು ಏರ್ಪಡಿಸಲಾಗಿದ್ದ “ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಕೌಶಲ್ಯ ತರಬೇತಿ ಶಿಬಿರ ಚಾಲನೆ ಕಾರ್ಯಕ್ರಮ” ೨೦೨೦-೨೧ರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಶ್ವದಲ್ಲಿ ಅತಿ ಹೆಚ್ಚು ಯುವಜನತೆಯನ್ನು ಹೊಂದಿರುವ ದೇಶ ಭಾರತವಾಗಿದ್ದು, ವಿಶೇಷ ಸಾಧನೆಗಳನ್ನು ಮಾಡುವ ಮೂಲಕ ವಿಶ್ವದ ಅತ್ಯುತ್ತಮ ರಾಷ್ಟ್ರವಾಗಲು ಎಲ್ಲರೂ ಶ್ರಮಿಸುವ ಮೂಲಕ ಸಹಕರಿಸಬೇಕು. ಸ್ವಾತಂತ್ರ್ಯ ಚಳುವಳಿಯಲ್ಲಿ ಪಾಲ್ಗೊಂಡಿದ್ದ ಮಹಾತ್ಮ ಗಾಂಧೀಜಿ ಮತ್ತು ಲಾಲಾ ಲಜಪತರಾಯ್ ಅವರಂತಹ ಹೋರಾಟಗಾರರು ಸಹ ವಿವೇಕಾನಂದರ ತತ್ವಗಳನ್ನು ಅಳವಡಿಸಿಕೊಂಡಿದ್ದರೆಂದು ತಿಳಿಸಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದಿನ ಯುವಜನತೆ ತಮ್ಮ ಶಕ್ತಿ, ಸಾಮರ್ಥ್ಯವನ್ನು ಮರೆತು ಸಾಧನೆಯ ಕಡೆ ಹೆಜ್ಜೆ ಹಾಕುವ ಬದಲು ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದು ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರಂತಹ ದೇಶ ಭಕ್ತರು, ಸಂತರು, ತತ್ವಜ್ಞಾನಿಗಳು ಆದರ್ಶವಾಗಬೇಕು ಆದರೆ ಇಂದು ನಟ-ನಟಿಯರ ಹೆಸರುಗಳನ್ನು ಹೇಳಿಕೊಂಡು ಓಡಾಡುತ್ತಿರುವುದು ಸರಿಯಲ್ಲ ಎಂದರು. ಅಲ್ಲದೆ, ಮೊಬೈಲ್ ಹಾಗೂ ಧಾರವಾಹಿಗಳ ಮೋಹವನ್ನು ಬಿಟ್ಟು ಸತತ ಅಭ್ಯಾಸ ಮಾಡುವ ಮೂಲಕ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅತ್ಯಂತ ಕಡಿಮೆ ಅವಧಿಯಲ್ಲಿ ಜೀವಿಸಿದ್ದ ವಿವೇಕಾನಂದರು, ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಸಾರವನ್ನು ಚಿಕಾಗೊ ಸಮ್ಮೇಳನದ ಮೂಲಕ ವಿಶ್ವಕ್ಕೆ ತಿಳಿಸಿದ ವೇದಾಂತ ಕೇಸರಿ ಅವರಾಗಿದ್ದರು. ಅವರ ದೇಶಭಕ್ತಿ ಸಿದ್ಧಾಂತವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದರು.ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ ಅವರು ಮಾತನಾಡಿ, ಯುವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ವರ್ಷವಿಡೀ ಯುವಕರಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ಗಳಿಸಲು ಸಾಧ್ಯ ಎಂದರಲ್ಲದೆ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳುವ ಮೊದಲು ನಮ್ಮ ದೇಶದ ಸಂಸ್ಕೃತಿಯನ್ನು ನಾವು ಗೌರವಿಸಬೇಕು ಎಂದು ತಿಳಿಸಿದರು.
ದೇಶ ಸುತ್ತು ಕೋಶ ಓದು ಎಂಬ ಮಾತಿಗೆ ವಿವೇಕಾನಂದರೇ ಮಾದರಿಯಾಗಿದ್ದರು. ಶಕ್ತಿಯೇ ಜೀವನ, ದುರ್ಬಲತೆಯೇ ಮರಣ ಎಂದು ಸಾರುವ ಮೂಲಕ ಯುವಕರನ್ನು ಎಚ್ಚರಿಸುವ ಕೆಲಸವನ್ನು ಮಾಡಿದ ಮಹಾನ್ ಚೇತನ ಎಂದರು. ಯಾವುದೇ ವೃತ್ತಿ ಮಾಡಲು ಅಂಜಿಕೆ ಬೇಡ, ಶಕ್ತಿ, ಯುಕ್ತಿ ಮತ್ತು ಸಮಯವನ್ನು ವ್ಯರ್ಥ ಮಾಡದೆ ಗುರಿ ಕಡೆ ಗಮನಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ದೊಡ್ಡಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಸದಾಶಿವ ಅವರು ಸ್ವಾಮಿ ವಿವೇಕಾನಂದರ ಜೀವನ ಕುರಿತು ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಶಾಲಾ-ಕಾಲೇಜುಗಳಲ್ಲಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ಬಹುಮಾನ ವಿತರಿಸಿದರು ಹಾಗೂ ಕ್ರೀಡಾಪಟುಗಳಿಗೆ ಕ್ರೀಡಾ ಕಿಟ್‌ಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಆನಂದ್, ಪುರಸಭೆ ಸದಸ್ಯ ರವೀಂದ್ರ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಮುನಿರಾಜು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಜಿಲ್ಲಾ ಕೌಶಲ್ಯ ಅಧಿಕಾರಿ ಲಕ್ಷ್ಮಿನಾರಾಯಣ, ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಅಧಿಕಾರಿ ನಾಗರಾಜು, ದೇವನಹಳ್ಳಿ ಪುರಸಭೆ ಮುಖ್ಯಾಧಿಕಾರಿ ನಾಗರಾಜು ಮತ್ತಿತ್ತರರು ಉಪಸ್ಥಿತರಿದ್ದರು.