ಬೆಂಗಳೂರು,ಮಾ.೨೬;ನಾಡಿನ ಶಕ್ತಿಕೇಂದ್ರವಾದ ವಿಧಾನಸೌಧದ ಮುಂಭಾಗದಲ್ಲಿಂದು ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ ಇಂದು ಸಂಜೆ ಆಗಲಿದೆ ಎಂದು ಕಂದಾಯ ಸಚಿವ ಹಾಗೂ ಈ ಪುತ್ಥಳಿಗಳ ಸ್ಥಾಪನೆಯ ಉಸ್ತುವಾರಿ ಸಮಿತಿ ಅಧ್ಯಕ್ಷ ಆರ್. ಅಶೋಕ್ ಹೇಳಿದರು.
ವಿಧಾನಸೌಧದ ಪೂರ್ವಭಾಗದ ಮುಂಭಾಗದಲ್ಲಿ ಶ್ರೀ ಜಗಜ್ಯೋತಿ ಹಾಗೂ ನಾಡಪ್ರಭುಕೆಂಪೇಗೌಡರ ಪ್ರತಿಮೆಗಳನ್ನು ಸ್ಥಾಪಿಸಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾರವರು, ಈ ಪ್ರತಿಮೆಗಳನ್ನು ಅನಾವರಣಗೊಳಿಸುವರು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಆದಿಚುಂಚನಗಿರಿ ಮಠ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ನಂಜಾವಧೂತ ಸ್ವಾಮೀಜಿ, ವಚನಾನಂದ ಸ್ವಾಮೀಜಿ, ಬಸವ ಮಾದರ ಚನ್ನಯ್ಯ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಠದ ಕುಮಾರಚಂದ್ರಶೇಖರನಾಥ ಸ್ವಾಮೀಜಿಗಳು ಭಾಗಿಯಾಗುವರು ಎಂದು ಅವರು ಹೇಳಿದರು.