ವಿಶ್ವವಿಖ್ಯಾತ ಹಂಪಿಯಲ್ಲಿ ಸ್ವದೇಶ್ ದರ್ಶನ ಅಧಿಕಾರಿಗಳು ಸಹಕರಿಸಲು: ಡಿಸಿ ಸೂಚನೆ


ಸಂಜೆವಾಣಿ ವಾರ್ತೆ
ಹೊಸಪೇಟೆ ಮೇ.25:  ವಿಶ್ವಪಾರಂಪರಿಕ ತಾಣವಾದ ಹಂಪಿಯು ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಸ್ವದೇಶ್ ದರ್ಶನ್ 2.0ಗೆ ಆಯ್ಕೆಯಾಗಿದ್ದು, ಖಾಸಗಿ ಸಂಸ್ಥೆಯ ಮೂಲಕ ಯೋಜನೆ ಅನುಷ್ಠಾನಗೊಳ್ಳಲಿದೆ. ವಿವಿಧ ಇಲಾಖೆಯ ಅಧಿಕಾರಿಗಳು ಯೋಜನಾ ಅನುಷ್ಠಾನಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ವೆಂಕಟೇಶ್ ಟಿ. ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದ ಪ್ರವಾಸಿ ತಾಣಗಳಾದ ಮೈಸೂರು ಹಾಗೂ ಹಂಪಿ ಈ ಯೋಜನೆಗೆ ಆಯ್ಕೆಯಾಗಿದ್ದು, ಯೋಜನೆ ಅನುಷ್ಠಾನಕ್ಕೆ ಅಗತ್ಯವಾದ ಸಹಕಾರವನ್ನು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ನೀಡಬೇಕು ಎಂದರು.
ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ, ವಿಶ್ವವಿಖ್ಯಾತ ಹಂಪಿಯಲ್ಲಿ ಜಾರಿಗೊಳಿಸಲು ಸಲ್ಲಿಸಿದ ಪ್ರಸ್ತಾವನೆಯಂತೆ ಈ ಯೋಜನೆ ಆಯ್ಕೆಯಾಗಿದೆ. ಖಾಸಗಿ ಸಂಸ್ಥೆಯ ಮೂಲಕ  ಅಂದಾಜು 2 ವರ್ಷಗಳ ಕಾಲ ಅನುಷ್ಟಾನ ಪ್ರಕ್ರಿಯೆ ನೇರವೇರಲಿದ್ದು, ವಿವಿಧ ಇಲಾಖೆಯ ಅಧಿಕಾರಿಗಳು ಸಂಸ್ಥೆಯೊಂದಿಗೆ ಸಹಕರಿಸಬೇಕು.
ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಹಾಗೂ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರ (ಹವಾಮಾ) ಸಹ ಸೂಕ್ತ ನಿರ್ವಹಣೆಯನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಸಭೆಯಲ್ಲಿ ಸ್ವದೇಶ್ ದರ್ಶನ್ 2.0 ಯೋಜನೆಯ ಅನುಷ್ಟಾನ ಕುರಿತು ಮಾಹಿತಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಹಂಪಿ ವಿಶ್ವಪರಂಪರಾ ಅಭಿವೃದ್ಧಿ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಸಿದ್ಧರಾಮೇಶ್ವರ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ತಿಪ್ಪೇಸ್ವಾಮಿ, ತಹಶೀಲ್ದಾರ್ ಪ್ರತಿಭಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.