ವಿಶ್ವ ಜನಸಂಖ್ಯೆ ನಿಯಂತ್ರಣ ಜನಜಾಗೃತಿ ಜಾಥಾ

ತುಮಕೂರು, ಜು. ೨೫- ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಕುಟುಂಬ ಯೋಜನೆ ಉಪಯೋಗಗಳನ್ನು ನಮ್ಮದಾಗಿಸಿ ಉನ್ನತಿಯ ಹೊಸ ಆಧ್ಯಾಯ ಬರೆಯೋಣ ಎಂಬ ಘೋಷವಾಕ್ಯದೊಂದಿಗೆ ಜನಸಂಖ್ಯೆ ನಿಯಂತ್ರಣ ಕುರಿತು ಜನಜಾಗೃತಿ ಜಾಥಾವನ್ನು ನಗರದಲ್ಲಿ ನಡೆಸಲಾಯಿತು.
ಇಲ್ಲಿನ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜನಸಂಖ್ಯೆ ನಿಯಂತ್ರಣ ಕುರಿತ ಜನಜಾಗೃತಿ ಜಾಥಾಕ್ಕೆ ಮಹಾನಗರ ಪಾಲಿಕೆ ಮೇಯರ್ ಬಿ.ಜಿ. ಕೃಷ್ಣಪ್ಪ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಭಾರತ ದೇಶ ಜನಸಂಖ್ಯೆಯಲ್ಲಿ ಮುಂಚೂಣಿಯಲ್ಲಿದೆ. ಜನಸಂಖ್ಯಾ ಸ್ಫೋಟವನ್ನು ನಿಯಂತ್ರಣಗೊಳಿಸುವಲ್ಲಿ ಅಧಿಕಾರಿಗಳು ಸಹ ಮುಂದಾಗಿದ್ದಾರೆ. ಈ ಕುರಿತು ಜನರಲ್ಲಿ ಮತ್ತಷ್ಟು ಅರಿವು ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕಿದೆ ಎಂದರು.
ಜನಸಾಮಾನ್ಯರಿಗೆ ಜನಸಂಖ್ಯೆ ನಿಯಂತ್ರಣದ ಬಗ್ಗೆ ಅರಿವು ಮೂಡಿಸುವ ಇಂತಹ ಕಾರ್ಯಕ್ರಮ ಅತ್ಯಗತ್ಯವಾಗಿದೆ ಎಂದರು.
ಡಿಹೆಚ್‌ಓ ಡಾ. ಮಂಜುನಾಥ್ ಮಾತನಾಡಿ, ಕುಟುಂಬ ಯೋಜನೆ ಕಾರ್ಯಕ್ರಮಗಳ ಬಗ್ಗೆ ಪ್ರತಿಯೊಬ್ಬರೂ ಅರಿವು ಮೂಡಿಸಿಕೊಂಡು ಪಾಲಿಸುವ ಮೂಲಕ ಜನಸಂಖ್ಯೆ ನಿಯಂತ್ರಣ ಮಾಡುವ ವಿಧಾನಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.
ವಿಶ್ವದಲ್ಲೇ ಜನಸಂಖ್ಯೆಯಲ್ಲಿ ಚೀನಾ ಮೊದಲನೇ ಸ್ಥಾನದಲ್ಲಿದೆ. ಮುಂದಿನ ಎರಡು-ಮೂರು ವರ್ಷಗಳಲ್ಲಿ ಭಾರತ ಚೀನಾ ಹಿಂದಿಕ್ಕುವ ಸಾಧ್ಯತೆ ಇದೆ. ಜನಸಂಖ್ಯೆ ಹೆಚ್ಚಾದರೆ ಉದ್ಯೋಗ, ಶಿಕ್ಷಣ ಸೇರಿದಂತೆ ಮೂಲಭೂತ ಸೌಕರ್ಯಗಳಿಗೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ. ಹಾಗಾಗಿ ಜನಸಂಖ್ಯೆ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.
ಜಿಲ್ಲಾಸ್ಪತ್ರೆಯಿಂದ ಜಾಥಾದಲ್ಲಿ ತೆರಳಿದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳ ದಾರಿಯುದ್ದಕ್ಕ ಜನಸಂಖ್ಯೆ ನಿಯಂತ್ರಣ ಕುರಿತು ಘೋಷಣೆಗಳನ್ನು ಕೂಗುತ್ತಾ ಡಿಹೆಚ್‌ಓ ಕಚೇರಿವರೆಗೆ ಸಾಗಿದರು.
ಜಾಥಾದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಖಾ, ಟಿಹೆಚ್‌ಓ ಡಾ. ಲಕ್ಷ್ಮೀಕಾಂತ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಪ್ಪ, ರಾಜಣ್ಣ, ಜಯಣ್ಣ, ರವಿಶಂಕರ್, ಶ್ರೀನಿವಾಸ್, ರಘು, ಸತೀಶ್ ಮತ್ತಿತರರು ಪಾಲ್ಗೊಂಡಿದ್ದರು.