ವೀರಶೈವ ಲಿಂಗಾಯತರನ್ನ ಒಬಿಸಿ ಪಟ್ಟಿಗೆ ಸೇರಿಸಿ

ಬೀದರ್: ಜು.16:ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರದ ಇತರ ಹಿಂದುಳಿದ ವರ್ಗ(ಒಬಿಸಿ)ಗಳ ಪಟ್ಟಿಗೆ ಸೇರಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ಆಗ್ರಹಿಸಿದೆ.

ಮಹಾಸಭಾದ ಜಿಲ್ಲಾ ಉಸ್ತುವಾರಿ ಗುರಮ್ಮ ಸಿದ್ದಾರೆಡ್ಡಿ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ವೈಜಿನಾಥ ಕಮಠಾಣೆ ಅವರು ನಗರದಲ್ಲಿ ಶುಕ್ರವಾರ ಈ ಕುರಿತು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಸಲ್ಲಿಸಿದರು.

ನೆರೆಯ ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಅಲ್ಲಿನ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರದ ಅನುಮತಿ ಪಡೆದು ವೀರಶೈವ ಲಿಂಗಾಯತದಲ್ಲಿನ ಪಂಡಗಳನ್ನು ಇತರ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿವೆ. ಸಮುದಾಯದ ಜನರಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನೂ ಒದಗಿಸಿವೆ. ಆದರೆ, ರಾಜ್ಯದಲ್ಲಿ ಮಾತ್ರ ಸಮುದಾಯದ ಜನ ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು.

ಕೂಡಲೇ ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರದ ಇತರ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.