ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ರಚನೆ: ಬಹು ದಿನಗಳ ಬೇಡಿಕೆಗೆ ಸ್ಪಂದನೆ

ಬೀದರ:ನ.19: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವೀರಶೈವ- ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಆದೇಶಿಸುವ ಮೂಲಕ ವೀರಶೈವ -ಲಿಂಗಾಯತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದ್ದಾರೆ.

ವೀರಶೈವ ಲಿಂಗಾಯತರಲ್ಲೂ ಬಹಳಷ್ಟು ಜನ ಬಡವರು ಇದ್ದಾರೆ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ನೂತನ ನಿಗಮ ಅವರ ಏಳಿಗೆಗೆ ನೆರವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಯಡಿಯೂರಪ್ಪ ಅವರು ಸರ್ವ ಸಮುದಾಯಗಳ ಏಳಿಗೆಗೆ ಅವಿರತ ಶ್ರಮಿಸುತ್ತಿದ್ದಾರೆ. ಲಿಂಗಾಯತ ಸಮುದಾಯದವರೇ ಆದ ಅವರಿಂದ ಇದೀಗ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ರಚನೆಯ ಮಹತ್ವದ ಕಾರ್ಯ ಆಗಿದೆ ಎಂದು ಹೇಳಿದ್ದಾರೆ.

ನಿಗಮ ಸ್ಥಾಪನೆ ನಂತರ ವೀರಶೈವ- ಲಿಂಗಾಯತರಿಗೆ ಸರ್ಕಾರದ ವಿವಿಧ ಸೌಲಭ್ಯಗಳು ಲಭಿಸಲಿವೆ. ಸಮುದಾಯದಲ್ಲಿ ಬಹಳಷ್ಟು ಬದಲಾವಣೆ ಆಗಲಿದೆ ಎಂದು ತಿಳಿಸಿದ್ದಾರೆ.

ನಿಗಮದ ಮೂಲಕ ವೀರಶೈವ-ಲಿಂಗಾಯತರಲ್ಲಿ ಹೊಸ ಚೈತನ್ಯ ಮೂಡಿಸಿರುವ ಯಡಿಯೂರಪ್ಪ ಅವರಿಗೆ ಕೃತಜ್ಞತೆ ಅರ್ಪಿಸಲಾಗುವುದು ಎಂದು ಹೇಳಿದ್ದಾರೆ.