ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ:ಅಷ್ಠಗಿ ಸ್ವಾಗತ

ಕಲಬುರಗಿ:ನ 17: ವೀರಶೈವ-ಲಿಂಗಾಯತ ಸಮಾಜದಲ್ಲಿ ಆರ್ಥಿಕ,ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರು ಗಣನೀಯ ಸಂಖ್ಯೆಯಲ್ಲಿದ್ದು, ರಾಜ್ಯದಲ್ಲಿ ವೀರಶೈವ-ಲಿಂಗಾಯತ ಸಮುದಾಯವು ಅತಿದೊಡ್ಡ ಪ್ರಮಾಣದಲ್ಲಿ ಇರುವುದರಿಂದ ಈ ಸಮುದಾಯಕ್ಕೆ ಅಭಿವೃದ್ಧಿ ನಿಗಮ ರಚನೆ ಮಾಡಬೇಕೆಂಬ ಎರಡು ದಶಕಗಳ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರವು,ಹೆಚ್ಚಿನ ಮುತುವರ್ಜಿವಹಿಸಿ;ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವುದರ ಮೂಲಕ ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಮಾನ್ಯ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯುರಪ್ಪ ಅವರ ಕ್ರಮ ಸ್ವಾಗತಾರ್ಹ ಮತ್ತು ಅಭಿನಂದನಾರ್ಹವಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಅಂಬಾರಾಯ ಅಷ್ಠಗಿ ಹೇಳಿದ್ದಾರೆ. ಈ ನಿಗಮದ ಸ್ಥಾಪನೆಯಿಂದ ಹೆಚ್ಚಿನ ಅನುದಾನ ಬಿಡುಗಡೆಯಾಗಲಿದ್ದು, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಕ್ಷೇತ್ರಗಳಿಗ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರಿಯಾಗಲಿದೆ.
ವೀರಶೈವ- ಲಿಂಗಾಯತ ಅಭಿವೃದ್ಧಿ ನಿಗಮದ ರಚನೆಗೆ ಸಹಕರಿಸಿದ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ಅಂಬಾರಾಯ ಅಷ್ಠಗಿ ಅಭಿನಂದನೆ ಸಲ್ಲಿಸಿದ್ದಾರೆ.