ವೃತ್ತಿಪರ ಕೋರ್ಸ್‌ಗೆ ಸಿಇಟಿ ಅಂಕ ಮಾನದಂಡ

ಬೆಂಗಳೂರು,ಜೂ.೮- ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಈ ಬಾರಿ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದೆ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಅಂಕಗಳನ್ನು ಮಾತ್ರ ಪರಿಗಣಿಸುವ ಮಹತ್ವದ ತೀರ್ಮಾನವನ್ನು ರಾಜ್ಯಸರ್ಕಾರ ಕೈಗೊಂಡಿದೆ. ಈ ಸಾಲಿನ ಸಿಇಟಿ ಪರೀಕ್ಷೆಗಳು ಆಗಸ್ಟ್ ೨೮ ಮತ್ತು ೨೯ ರಂದು ನಡೆಯಲಿವೆ.
ಈ ಸಾಲಿನ ಸಿಇಟಿ ಪರೀಕ್ಷೆಯ ಸಂಬಂಧ ಉನ್ನತ ಶಿಕ್ಷಣ ಸಚಿವರಾಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪಿಯುಸಿ ಅಂಕಗಳನ್ನು ಪರಿಗಣಿಸದೆ ಸಿಇಟಿ ಅಂಕಗಳ ಮೇಲೆ ರ್‍ಯಾಂಕಿಂಗ್ ನೀಡಿ, ಪ್ರವೇಶ ಕಲ್ಪಿಸುವ ತೀರ್ಮಾನವನ್ನು ಮಾಡಲಾಗಿದೆ ಎಂದು ಈ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.
ಈ ಸಾಲಿನ ಸಿಇಟಿ ಪರೀಕ್ಷೆಗಳು ಆಗಸ್ಟ್ ೨೮ ಮತ್ತು ೧೯ ರಂದು ನಡೆಯಲಿದೆ. ಆ. ೨೮ ರಂದು ಜೀವಶಾಸ್ತ್ರ ಮತ್ತು ಗಣಿತ ವಿಷಯಗಳ ಪರೀಕ್ಷೆ, ಆ. ೨೯ ರಂದು ಭೌತಶಾಸ್ತ್ರ ಮತ್ತು ರಸಾಯನ ಶಾಸ್ತ್ರ ವಿಷಯಗಳ ಪರೀಕ್ಷೆ ನಡೆಯಲಿದ್ದು, ಆ. ೩೦ ರಂದು ಗಡಿನಾಡು, ಹೊರನಾಡು ಕನ್ನಡಿಗರಿಗೆ ಕನ್ನಡ ವಿಷಯದ ಪರೀಕ್ಷೆ ನಡೆಯಲಿದೆ ಎಂದವರು ವಿವರ ನೀಡಿದರು.
ಸಿಇಟಿ ಪರೀಕ್ಷೆಗಳಿಗೆ ಜೂ. ೧೫ ರಿಂದ ನೋಂದಣಿ ಆರಂಭವಾಗಲಿದೆ ಎಂದು ಅವರು ತಿಳಿಸಿ, ನೀಟ್ ಮಾದರಿಯಲ್ಲೇ ಸಿಇಟಿ ಪರೀಕ್ಷೆಯಲ್ಲೂ ಕನಿಷ್ಠ ಅಂಕಗಳನ್ನು ನಿಗದಿ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದರು.
ಕೊರೊನಾ ೨ನೇ ಅಲೆ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸದೆ ಎಲ್ಲ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಿ ಗ್ರೇಡಿಂಗ್ ಫಲಿತಾಂಶ ನೀಡಿರುವುದರಿಂದ ವೃತ್ತಿಪರ ಕೋರ್ಸ್‌ಗಳಿಗೆ ದ್ವಿತೀಯ ಪಿಯುಸಿ ಅಂಕ ಪರಿಗಣಿಸಬೇಡಿ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಸಲಹೆ ಮಾಡಿದ್ದರು. ಅದರಂತೆ ಈ ಬಗ್ಗೆ ಶಿಕ್ಷಣ ತಜ್ಞರು ಎಲ್ಲರ ಜತೆ ಚರ್ಚಿಸಿ ಸಿಇಟಿ ಅಂಕಗಳನ್ನು ಮಾನದಂಡವನ್ನಾಗಿಟ್ಟುಕೊಂಡು ವೃತ್ತಿ ಪರ ಕೋರ್ಸ್‌ಗಳ ಪ್ರವೇಶ ನೀಡುವ ತೀರ್ಮಾನಕ್ಕೆ ಬಂದಿದ್ದೇವೆ ಎಂದರು.
ಪಿಯುಸಿ ಅಂಕಗಳನ್ನು ಪರಿಗಣನೆ ಮಾಡದ ಹಿನ್ನೆಲೆಯಲ್ಲಿ ನೀತಿಯಲ್ಲಿ ಅಗತ್ಯ ತಿದ್ದುಪಡಿಯನ್ನು ಮಾಡಲಾಗುವುದು ಎಂದು ಅವರು ಹೇಳಿದರು.
ವಿಜ್ಞಾನ ವಿಭಾಗದ ಪದವಿ ವಿದ್ಯಾರ್ಥಿಗಳ ಪ್ರವೇಶವನ್ನು ಸಿಇಟಿ ಅಂಕಗಳನ್ನು ಆಧಾರಿಸಿಯೇ ನೀಡುವ ಬಗ್ಗೆಯೂ ಚಿಂತನೆ ನಡೆದಿದೆ ಎಂದರು.
ಆಗಸ್ಟ್ ೨೮ ಮತ್ತು ೨೯ ರಂದು ನಡೆಯುವ ಸಿಇಟಿ ಪರೀಕ್ಷೆಗೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.ರಾಜ್ಯಾದ್ಯಂತ ೫೦೦ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದರು.

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಈ ಬಾರಿ ಸಿಇಟಿ ಅಂಕವೇ ಮಾನದಂಡ.

ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದಿರಲು ತೀರ್ಮಾನ.

ಆಗಸ್ಟ್ ೨೮ ಮತ್ತು ೨೯ ಸಿಇಟಿ ಪರೀಕ್ಷೆ.

ಆಗಸ್ಟ್ ೨೮ ಜೀವಶಾಸ್ತ್ರ, ಗಣಿತ ಪರೀಕ್ಷೆ.

ಆಗಸ್ಟ್ ೨೯ ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ.