ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಂದ ಜಿಮ್ಸ್‍ಗೆ ಭೇಟಿ ಪರಿಶೀಲನೆ

ಗದಗ(ಕರ್ನಾಟಕ ವಾರ್ತೆ) ಆ.27: ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖಾ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರು ಭಾನುವಾರದಂದು ನಗರದ ದುಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ದುಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಚಿಕಿತ್ಸೆ ನೀಡುತ್ತಿರುವ ಕುರಿತು ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಪ್ರಥಮಾಧ್ಯತೇ ನೀಡುವಂತೆ ಸೂಚಿಸಿದರು. ಆಸ್ಪತ್ರೆಗೆ ನಿಯೋಜನೆಗೊಂಡಂತಹ ವೈದ್ಯರು ಸಮಯಕ್ಕೆ ಸರಿಯಾಗಿ ಹಾಜರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗುವ ಮಹಿಳೆಯರು ಮತ್ತು ಮಕ್ಕಳಿಗೆ ಉತ್ತಮ ಚಿಕಿತ್ಸೆ ಒದಗಿಸುವಂತೆ ತಿಳಿಸಿದರು.
ತದನಂತರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿನ ಒಳರೋಗಿಗಳ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳ ಬಗ್ಗೆ ಅಸಡ್ಡೆ ಭಾವನೆ ತೊರದೆ ಉತ್ತಮ ಚಿಕಿತ್ಸೆ ನೀಡಲು ಪ್ರತಿಯೊಬ್ಬ ವೈದ್ಯರು ಮುಂದಾಗಬೇಕು. ಆಸ್ಪತ್ರೆಗೆ ಆಗಮಿಸುವ ರೋಗಿಗಳನ್ನು ವಿನಾಕಾರಣ ಅಲೆದಾಡಿಸುವ ಕಾರ್ಯ ಮಾಡದೇ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ ಗುಣಮಟ್ಟದ ಚಿಕಿತ್ಸೆಗೆ ಆದ್ಯತೇ ನೀಡುವಂತೆ ತಿಳಿಸಿದರು.
450 ಹಾಸಿಗೆಗಳ ಹೊಸ ಕಟ್ಟಡ ಉತ್ತಮವಾಗಿ ನಿರ್ಮಾಣವಾಗಿದ್ದು ಈ ಆಸ್ಪತ್ರೆ ಪೂರ್ಣಪ್ರಮಾಣದ ಚಿಕಿತ್ಸೆಯನ್ನು ರೋಗಿಗಳಿಗೆ ಇಲ್ಲಿ ದೊರಕಬೇಕು. ಅದಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ಒದಗಿಸಲಾಗುವದು ಎಂದು ಭರವಸೆ ನೀಡಿದರು. ಅಲ್ಲದೇ ಕಟ್ಟಡ ನಿರ್ವಹಣೆ ಉತ್ತಮ ರೀತಿಯಲ್ಲಿ ಆಗಬೇಕೆಂಬ ನೀರಿಕ್ಷೆ ಹೊಂದಲಾಗಿದ್ದು ಈ ನಿಟ್ಟಿನಲ್ಲಿ ಆಡಳಿತ ವೈದ್ಯಾಧಿಕಾರಿಗಳು ಗಮನಹರಿಸಬೇಕು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಜಿಮ್ಸ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಶಸ್ತ್ರಚಿಕಿತ್ಸಕ ಕರಿಗೌಡರ, ಜಿಮ್ಸ ಹಣಕಾಸು ಅಧಿಕಾರಿ ಜೆ.ಸಿ.ಪ್ರಶಾಂತ, ಮಾಜಿ ಶಾಸಕರಾದ ಡಿ.ಆರ್.ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಗುರಣ್ಣ ಬಳಗಾನೂರ, ಸೇರಿದಂತೆ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.