ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಮಹಿಳೆ ಸಾವು


ದಾವಣಗೆರೆ.ನ.೨೪: ಹೆರಿಗೆಗೆ ಬಂದ ಮಹಿಳೆ ಮೃತಪಟ್ಟ ಘಟನೆ ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕಮದೋಡ ಗ್ರಾಮದ ಗರ್ಭಿಣಿ 24 ವರ್ಷದ ಅನುಷಾ ಮೃತಪಟ್ಟವರು ಎಂದು ತಿಳಿದು ಬಂದಿದೆ.ಒಂದು ವರ್ಷದ ಹಿಂದೆ ಕಮದೋಡದ ಸಂಜಯ್ ಎಂಬುವವರನ್ನ ಮದುವೆಯಾಗಿದ್ದ ಅನುಷಾ ಗರ್ಭಿಣಿಯಾಗಿದ್ದರು. ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕರೆದುಕೊಂಡು ಬರಲಾಗಿತ್ತು. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದ ಕಾರಣ ಅನುಷಾ ಸಾವು ಕಂಡಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದಿರುವುದೇ ಕಾರಣ ಎಂದು ಮೃತಳ ಪತಿ, ಸಂಬಂಧಿಕರು, ಪೋಷಕರು ಆರೋಪಿಸಿದ್ದಾರೆ.  ಆಕೆಯ ಹೊಟ್ಟೆಯಲ್ಲಿದ್ದ ಮಗು ಬದುಕಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ತಮಗೆ ನ್ಯಾಯ ಕೊಡಿಸುವಂತೆ ಪೊಲೀಸರ ಎದುರು ಕುಟುಂಬಸ್ಥರು  ಆಕ್ರೋಶ ವ್ಯಕ್ತಪಡಿಸಿದ್ದಾರಲ್ಲದೇ, ಚಿಗಟೇರಿ ಜಿಲ್ಲಾಸ್ಪತ್ರೆಯ ಅವ್ಯವಸ್ಥೆಯ ವಿರುದ್ಧ ಕಿಡಿಕಾರಿದ್ದಾರೆ. ಕೆಲ ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಅನುಷಾ ಹಾಗೂ ಸಂಜಯ್ ಅನೋನ್ಯವಾಗಿದ್ದರು. ತನ್ನ ಪತ್ನಿ  ಉಳಿಸಿಕೊಳ್ಳಲು ಸಂಜಯ್ ನಡೆಸಿದ ಪ್ರಯತ್ನವೆಲ್ಲಾ ವಿಫಲವಾಗಿದೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಸಂಜಯ್ ಆರೋಪಿಸಿದ್ದಾರೆ.ಸ್ಥಳಕ್ಕೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಬರುವಂತೆ ಸಂಬಂಧಿಕರು ಪಟ್ಟು ಹಿಡಿದಿದ್ದರು. ಸೂಕ್ತ ಚಿಕಿತ್ಸೆ ನೀಡದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.