ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಚಟುವಟಿಕೆ ಸಹಕಾರಿ

ಸಂಜೆವಾಣಿ ವಾರ್ತೆ

ಶಿವಮೊಗ್ಗ.ಜು.೨೫: ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತದೆ. ಖಿನ್ನತೆಯಿಂದ ದೂರ ಉಳಿಯಬಹುದಾಗಿದೆ. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಿರಂತರವಾಗಿ ಪಾಲ್ಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದರು.ಶಿವಮೊಗ್ಗ ನಗರದ ಅಕ್ಷರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಸಾಂಪ್ರದಾಯಿಕ ಉಡುಗೆ ತೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಯಲ್ಲಿ ಕಾಲೇಜು ಮಟ್ಟದಲ್ಲಿ ಸಿಗುವ ವೇದಿಕೆಗಳ, ಸಾಂಸ್ಕೃತಿಕ ಹಾಗೂ ಕ್ರೀಡಾ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.ಶಿವಮೊಗ್ಗ ಜಿಲ್ಲೆಯು ಸಾಂಸ್ಕೃತಿಕ ಮತ್ತು ಕ್ರೀಡಾ ಸಾಧಕರ ತವರೂರು. ಸಾಕಷ್ಟು ಜನರು ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಶಾಲಾ ಕಾಲೇಜಿನ ಹಂತದಿಂದಲೇ ಅಭ್ಯಾಸ ಆರಂಭಿಸುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಸಂಕಲ್ಪ ಮಾಡಬೇಕು ಎಂದರು.ಅಕ್ಷರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷೆ ರತ್ನಕುಮಾರಿ ಮಾತನಾಡಿ, ಕಾಲೇಜಿನ ಜೀವನವು ವಿದ್ಯಾರ್ಥಿಗಳಿಗೆ ಅತ್ಯಂತ ಮಹತ್ತರವಾಗಿದ್ದು, ಸಾಂಸ್ಕೃತಿಕ ವೇದಿಕೆಗಳಲ್ಲಿ ಭಾಗವಹಿಬೇಕು. ನಿಮ್ಮ ಆಸಕ್ತಿ ಇರುವ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಪ್ರಾಚಾರ್ಯ ಮೋಹನ್‌ಕುಮಾರ್ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಅವಕಾಶಗಳನ್ನು ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಜಿ.ವಿಜಯ್‌ಕುಮಾರ್ ಅವರು ಲಾವಣಿ, ಜಾನಪದ, ಹಳೇಯ ಕನ್ನಡ ಚಿತ್ರಗೀತೆಗಳನ್ನು ಹಾಡಿದರು.ರಹೀನಾ ಕೌನಂ, ಶ್ರೇಯಾ, ಆಕಾಶ್, ಗಿರೀಶ್, ಸುರೇಶ್ ಎಚ್.ಆರ್., ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ್‌ಕುಮಾರ್ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.