‘ವ್ಯತ್ಯಯವಾಗದ ರೀತಿಯಲ್ಲಿರೈತರಿಗೆ ವಿದ್ಯುತ್ ಪೂರೈಕೆ’


ಸಾಗರ, ನ.೨೫- ರಾಜ್ಯದ ರೈತರಿಗೆ ಯಾವುದೇ ವ್ಯತ್ಯಯವಾಗದಂತೆ ವಿದ್ಯುತ್ ಪೂರೈಕೆಗೆ ಕ್ರಮಕೈಗೊಳ್ಳಲಾಗುವುದು. ಯಾವುದೇ ಹಂತದಲ್ಲೂ ರೈತರಿಗೆ ತೊಂದರೆ ಆಗದಂತೆ ವಿದ್ಯುತ್ ಉತ್ಪಾದನೆ ಹಾಗೂ ಬೇಡಿಕೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.
ಇಂಧನ ಇಲಾಖೆ ಮೂಲಕ ರಾಜ್ಯದ ರೈತರಿಗೆ ಉಚಿತ ವಿದ್ಯುತ್ ನೀಡುವ ನಿಟ್ಟಿನಲ್ಲಿ ೧೬ ಸಾವಿರ ಕೋಟಿ ರೂ. ಸಬ್ಸಿಡಿ ರೂಪದಲ್ಲಿ ನೀಡಲಾಗುತ್ತಿದೆ. ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ೪೬ ಉಪಕೇಂದ್ರಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ರೈತರಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವ ಸಲುವಾಗಿ ಇಂಧನ ಇಲಾಖೆ ತೆಗೆದುಕೊಂಡಿರುವ ನಿರ್ಧಾರ ಉಪಯುಕ್ತವಾಗಿದೆ ಎಂದರು. ಅಮೃತ ಜ್ಯೋತಿ’ ಯೋಜನೆಯಡಿ ಪರಿಶಿಷ್ಟ ಸಮುದಾಯದವರಿಗೆ ೭೫ ಯೂನಿಟ್ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಶಿವಮೊಗ್ಗ ಜಿಲ್ಲೆಯ ಏಳು ಕಡೆ ಉಪಕೇಂದ್ರ ಪ್ರಾರಂಭವಾಗುತ್ತಿದೆ. ಬೆಳಕು’ ಯೋಜನೆಯಡಿ ಗ್ರಾಮೀಣ ಪ್ರದೇಶದ ಬಡಜನರ ಮನೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ ಎಂದರು.