ಶಂಕಿತ ಉಗ್ರರ ಬಂಧನ ಸಿಸಿಬಿ ತನಿಖೆ

(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು, ಜು. ೧೯- ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿರುವ ಸಿಸಿಬಿ ಪೊಲೀಸರನ್ನು ಅಭಿನಂದಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈ ಪ್ರಕರಣದ ಹೆಚ್ಚಿನ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ ಎಂದು ಹೇಳಿದರು.ವಿಧಾನಸಭೆಯಲ್ಲಿಂದು ವಿಪಕ್ಷಗಳ ಧರಣಿ ಮಧ್ಯೆಯೇ ಶಂಕಿತ ಉಗ್ರರ ಬಂಧನದ ಬಗ್ಗೆ ಸದನಕ್ಕೆ ವಿವರ ನೀಡಿದ ಅವರು, ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಸಕಾಲದಲ್ಲಿ ಆರೋಪಿಗಳನ್ನು ಬಂಧಿಸಿ ವಿಧ್ವಂಸಕ ಕೃತ್ಯಗಳನ್ನು ತಡೆದಿದ್ದಾರೆ ಎಂದು ಹೇಳಿ, ಪೊಲೀಸರ ಕಾರ್ಯವನ್ನು ಶ್ಲಾಘಿಸಿದರು.ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿ, ಅವರಿಂದ ಅಕ್ರಮ ಶಸ್ತ್ರಾಸ್ತ್ರ, ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರು ವಿಧ್ವಂಸಕ ಕೃತ್ಯಗಳನ್ನು ಹಾಗೂ ದೇಶ ವಿರೋಧಿ ಕಾರ್ಯಗಳನ್ನು ಎಸಗಲು ಸಂಚು ನಡೆಸಿರುವುದು ಗೊತ್ತಾಗಿದೆ. ಸಿಸಿಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ೫ ಜನ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ ಎಂದರು.ಬಂಧಿತರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ವಿಚಾರಣೆ ಎದುರಿಸುತ್ತಿದ್ದರು. ಇವರುಗಳು ಜೈಲಿನಲ್ಲಿರುವ ಕೆಲವರ ಸಂಪರ್ಕ ಸಾಧಿಸಿ ಕಾನೂನು ಬಾಹಿರ ಚಟುವಟಿಕೆಗಳನ್ನು ಎಸಗಲು ಸಂಚು ರೂಪಿಸಿದ್ದರು. ಈಗ ಇವರನ್ನೆಲ್ಲ ಬಂಧಿಸಿ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿತ್ತು. ಈ ಪ್ರಕರಣದ ತನಿಖೆಯನ್ನು ಈಗ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ ಎಂದು ಅವರು ಹೇಳಿದರು.