ಶಾಲಾ-ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ವಿಜಯಪುರ, ಮಾ.31-ಕೊಟ್ಪಾ ಕಾಯ್ದೆಯಡಿ ಜಿಲ್ಲೆಯ ಶಾಲಾ/ಕಾಲೇಜು ಆವರಣದಿಂದ 100 ಗಜ ಅಂತರದಲ್ಲಿ ಯಾವುದೇ ತಂಬಾಕು ಉತ್ಪನ್ನಗಳು ಮಾರಾಟವಾಗದಂತೆ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಮತ್ತು ಐ.ಡಿ.ಎಸ್.ಪಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ 100 ಕಾಲೇಜುಗಳನ್ನು ತಂಬಾಕು ಮುಕ್ತ ಕಾಲೇಜುಗಳನ್ನಾಗಿ ಘೋಷಿಸಲು ಪದವಿಪೂರ್ವಶಿಕ್ಷಣ ಇಲಾಖೆಯ ಉಪನಿರ್ದೇಶಕರು ಕ್ರಮ ಕೈಗೊಳ್ಳಬೇಕು ಅದರಂತೆ 200 ಶಾಲಾ ಶೈಕ್ಷಣಿಕ ಸಂಸ್ಥೆಗಳು ಮೇ 31ರ ಒಳಗಾಗಿ ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳನ್ನಾಗಿ ಘೋಷಿಸುವಂತೆ ಸೂಚನೆ ನೀಡಿದರು.
ಅದರಂತೆ ಮೇ 31 ರಂದು ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಪ್ರತಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಒಂದು ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು ಎಲ್ಲಾ ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಳಲ್ಲಿ ಸೆಕ್ಸನ್ 4ರ ನಾಮಫಲಕ ಅಳವಡಿಸಿ ಮೇ 31ರ ಒಳಗಾಗಿ ತಂಬಾಕು ಮುಕ್ತ ಕಚೇರಿಗಳನ್ನಾಗಿ ಘೋಷಿಸುವಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮಾವಾ ಮಾರಾಟ ಮಾಡುವವರ ವಿರುದ್ಧ ಆಹಾರ ಸುರಕ್ಷತಾ ಮತ್ತು ಭದ್ರತೆ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಬೇಕು ಹಾಗೂ ಪ್ರತಿ ಮಾಹೆ ಎಲ್ಲಾ ತಾಲೂಕುಗಳಲ್ಲಿ ಕೊಟ್ಪಾ 2003 ಅಡಿಯಲ್ಲಿ ದಾಳಿ ಮಾಡುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆ ಹಾಗೂ ತಂಡದವರು 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಹಾಗೂ ತಂಬಾಕು ಉತ್ಪನ್ನ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಜರುಗಿಸುವಂತೆ ಸೂಚನೆ ನೀಡಿ ಮೇ 2021 ರ ಒಳಗಾಗಿ ಜಿಲ್ಲೆಯನ್ನು ತಂಬಾಕು ಮುಕ್ತ ಎಂದು ಘೋಷಿಸಬೇಕಾಗಿರುವುದರಿಂದ ಪ್ರತಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ದಂಡ ವಸೂಲಾತಿಗೆ ಅವರು ಸೂಚನೆ ನೀಡಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಂತೆ ಅವರು ಸೂಚನೆ ನೀಡಿದರು.
ನಂತರ ಸಾಂಕ್ರಾಮಿಕ ರೋಗ ನಿಯಂತ್ರಣ ಸಮನ್ವಯ ಸಮಿತಿ ಸಭೆ ನಡೆಸಿದ ಅವರು ಜಿಲ್ಲೆಯಲ್ಲಿ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಮೂಲಕ ಸ್ವಚ್ಛತೆ ಕೈಗೊಳ್ಳಬೇಕು. ರೋಗರುಜಿನಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.
ಸಭೆಯಲ್ಲಿ ಮಹಾನಗರಪಾಲಿಕೆ ಆಯುಕ್ತ ಹರ್ಷ ಶೆಟ್ಟಿ, ಜಿಲ್ಲಾ ಶಸ್ತ್ರ ಚಿಕಿತ್ಸಕರು ಎಸ್. ಎ.ಕಟ್ಟಿ, ಜಿಲ್ಲಾ ಅಬಕಾರಿ ಆಯುಕ್ತ ಎಸ್. ಎಂ. ಕಮತರ್, ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಹಾಗೂ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಮಲ್ಲನಗೌಡ ಬಿರಾದಾರ, ರಾಜ್ಯ ತಂಬಾಕು ನಿಯಂತ್ರಣ ಘಟಕ ವಿಭಾಗಿಯ ಸಂಯೋಜಕರು ಮಹಾಂತೇಶ ಉಳ್ಳಾಗಡ್ಡಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.