
ಹುಬ್ಬಳ್ಳಿ, ಮಾ.15: ದೇಶದಲ್ಲಿ ರಸ್ತೆ, ವಿಮಾನ ನಿಲ್ದಾಣ, ರೈಲು ಮಾರ್ಗಗಳು, ಮೂಲ ಸೌಕರ್ಯ, ಸಾರಿಗೆ ಸಂಪರ್ಕ ಅಭಿವೃದ್ಧಿ ಆಗುತ್ತಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಆಗದ ಹೊರತು ದೇಶ ಅಭಿವೃದ್ಧಿಯಾಗದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಹೇಳಿದರು.
ಲ್ಯಾಮಿಂಗ್ಟನ್ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಶಿಕ್ಷಣ ಕೋಶ ( ಐ.ಇ.ಸಿ. ವಿಭಾಗ ), ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹುಬ್ಬಳ್ಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಜಂತುಹುಳು ರಹಿತ ಮಕ್ಕಳು ಆರೋಗ್ಯವಂತ ಮಕ್ಕಳು ಮತ್ತು ಆಲಬೆಂಡೊಜಲ್ ಮಾತ್ರೆಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳಾದ ಹಿನ್ನೆಲೆಯಲ್ಲಿ ಅಜಾದಿ ಕಾ ಅಮೃತ ಮಹೋತ್ಸವವನ್ನು ಆಚರಿಸಲಾಗಿದೆ. ಅಮೃತ ಕಾಲದಲ್ಲಿ ನಾವು ಇದ್ದೇವೆ. 2047 ಕ್ಕೆ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ. ಆ ನಿಟ್ಟಿನಲ್ಲಿ ವಿಕಸಿತ ಭಾರತ ವಿಕಸಿತ ಯುವ ಧೇಯದೊಂದಿಗೆ ಕೆಲಸ ಮಾಡಲಾಗುತ್ತಿದೆ. ಮಕ್ಕಳು ಸದೃಢ ಆರೋಗ್ಯವನ್ನು ತಮ್ಮದಾಗಿಸಿಕೊಳ್ಳಬೇಕು. ಶೇ. 61 ರಷ್ಟು ಜನರು ಅನೇಮೀಯಾ ಕಾಯಿಲೆಯಿಂದ ಬಳಲುತ್ತಿದ್ದಾರೆ. ನೂರು ಜನರಲ್ಲಿ 45 ಜನರಿಗೆ ಹಿಮೋಗ್ಲೋಬಿನ್, ರಕ್ತ ಕಡಿಮೆಯಿರುತ್ತದೆ. ಹೀಗಾಗಿ ಪೌಷ್ಟಿಕ ಆಹಾರದ ಕಡೆ ಗಮನ ಹರಿಸಬೇಕಾಗಿದೆ. ಪ್ರತಿದಿನವೂ ಚಟುವಟಿಕೆಯಿಂದ ಜೀವನ ನಡೆಸಬೇಕು. ಅನೆಮೀಯಾ ನಿವಾರಿಸಲು ಆಲಬೆಂಡೊಜಲ್ ಮಾತ್ರೆಗಳನ್ನು ಸೇವಿಸಬೇಕು. ಶೌಚಾಲಯವನ್ನು ಕಡ್ಡಾಯವಾಗಿ ಬಳಸಬೇಕಾಗುತ್ತದೆ. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಮೂಲಕ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಅನೆಮೀಯಾ ಮುಕ್ತ ಭಾರತ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಹೀಗಾಗಿ ಗುರಿ ಸಾಧನೆಗೆ ಎಲ್ಲರೂ ಸಂಕಲ್ಪ ಮಾಡಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಮಾತನಾಡಿ, ಮಕ್ಕಳಿಗೆ ಆಲಬೆಂಡೊಜಲ್ ಮಾತ್ರೆಗಳನ್ನು ವಿತರಣೆ ಮಾಡಲಾಗುತ್ತಿದೆ. ಈ ಮಾತ್ರೆಯಿಂದ ಯಾವುದೇ ಅಡ್ಡಪರಿಣಾಮವಿಲ್ಲ. ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ. ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಹಾಲು, ಬಾಳೆಹಣ್ಣನ್ನು ಮಕ್ಕಳಿಗೆ ವಿತರಿಸಲಾಗುತ್ತಿದೆ. ಮಕ್ಕಳು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಆಗಾಗ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಶಿಕ್ಷಕರು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಮಕ್ಕಳ ಆರೋಗ್ಯ ಹದಗೆಡದಂತೆ ಪಾಲಕರು ಎಚ್ಚರ ವಹಿಸಬೇಕು. ಆರೋಗ್ಯದ ಕುರಿತು ಪಾಲಕರಲ್ಲಿ ಅರಿವು ಮೂಡಿಸಬೇಕಾಗಿದೆ. ನಮ್ಮ ಆರೋಗ್ಯದ ಬಗ್ಗೆ ನಾವೇ ಚಿಂತನೆ ಮಾಡಬೇಕು. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಒಳ್ಳೆಯ ಅಂಕಗಳನ್ನು ತೆಗೆದುಕೊಂಡು ತೇರ್ಗಡೆಯಾಗಬೇಕು. ಹೀಗಾಗಿ ಮಕ್ಕಳು ಏಕಾಗ್ರತೆಯಿಂದ ಅಧ್ಯಯನ ನಡೆಸಬೇಕಾಗಿದೆ. ಇದರಿಂದ ಮಕ್ಕಳು ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಲು ಸಹಾಯಕವಾಗಲಿದೆ ಎಂದು ತಿಳಿಸಿದರು.
ಜಿಲ್ಲಾ ಆರ್.ಸಿ.ಎಚ್ ಡಾ. ಎಸ್. ಎಂ. ಹೊನಕೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ಫೆಬ್ರವರಿ ಹಾಗೂ ಡಿಸೆಂಬರ್ ತಿಂಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುತ್ತದೆ. ಜಿಲ್ಲೆಯ 6 ಲಕ್ಷ 83 ಸಾವಿರ ವಿದ್ಯಾರ್ಥಿಗಳಿಗೆ ಆಲಬೆಂಡೊಜಲ್ ಮಾತ್ರೆ ವಿತರಿಸಲಾಗುತ್ತಿದೆ. ಮಕ್ಕಳಲ್ಲಿನ ರಕ್ತಹೀನತೆ ನಿರ್ಮೂಲನೆ ಮಾಡಲು ಈ ಮಾತ್ರೆ ಅವಶ್ಯಕವಾಗಿದೆ. ವರ್ಷದಲ್ಲಿ ಎರಡು ಬಾರಿ ಈ ಮಾತ್ರೆಗಳನ್ನು ತೆಗೆದುಕೊಳ್ಳಬೇಕು. ವಿದ್ಯಾರ್ಥಿಗಳು ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಶುದ್ಧ ಕುಡಿಯುವ ನೀರು, ಶುದ್ಧ ಮತ್ತು ಪೌಷ್ಟಿಕ ಆಹಾರ, ಶೌಚಾಲಯ ಬಳಕೆ ಮಾಡಬೇಕು. ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಹ ಮಾತ್ರೆಗಳು ದೊರೆಯುತ್ತವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಶಿ ಪಾಟೀಲ, ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ಎಸ್. ಹಿತ್ತಲಮನಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ವೈದ್ಯಾಧಿಕಾರಿ ಡಾ.ಶ್ರೀಧರ ದಂಡಪ್ಪನವರ, ತಾಲೂಕು ಪಂಚಾಯತ ಅಕ್ಷರ ದಾಸೋಹ ವಿಭಾಗದ ಸಹನಿರ್ದೇಶಕ ಡಾ.ಸಂಗಮೇಶ ಬಂಗಾರಿಮಠ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಕೆ. ಚವ್ಹಾಣ, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಯಶ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಕ್ಷೇತ್ರ ಸಮನ್ವಯ ಅಧಿಕಾರಿ ಎಂ.ಎಸ್. ಶಿವಳ್ಳಿಮಠ ಸ್ವಾಗತಿಸಿದರು. ಲ್ಯಾಮಿಂಗ್ಟನ್ ಬಾಲಕರ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಜೆ.ಟಿ. ಪಾಟೀಲ ವಂದಿಸಿದರು. ವನಿತಾ ನಿರೂಪಿಸಿದರು.