ಶಾಲೆ ಆರಂಭ ನಾಳೆ ನಿರ್ಧಾರ

ಬೆಂಗಳೂರು,ನ.೨೨- ಕೊರೊನಾ ನಡುವೆಯೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಬೇಕೇ ಬೇಡವೇ ಎಂಬ ಬಗ್ಗೆ ನಾಳೆ ರಾಜ್ಯಸರ್ಕಾರ ಮಹತ್ವದ ತೀರ್ಮಾನ ಕೈಗೊಳ್ಳಲಿದೆ. ರಾಜ್ಯದಲ್ಲಿ ಶಾಲೆಗಳ ಪುನರಾರಂಭ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪರವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಶಾಲೆಗಳ ಆರಂಭದ ಕುರಿತಂತೆ ತೀರ್ಮಾನಗಳಾಗುವ ಸಾಧ್ಯತೆಗಳಿವೆ.
ಕೋವಿಡ್‌ನ ಈ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ಸಂಬಂಧ ಶಿಕ್ಷಣ ಇಲಾಖೆ ವರಿದಿಯೊಂದನ್ನು ಸಿದ್ಧಪಡಿಸಿದ್ದು, ನಾಳೆ ಈ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿ ನಂತರ ಈ ವರದಿಯ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಲಾಗುತ್ತದೆ.
ಈ ವರದಿ ಶಾಲೆಗಳ ಪುನರಾರಂಭದ ಬಗ್ಗೆ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆಯ ಆಯುಕ್ತರ ಅಭಿಪ್ರಾಯಗಳನ್ನು ಒಳಗೊಂಡಿದೆ.
ಕೋವಿಡ್‌ನ ಈ ಪರಿಸ್ಥಿತಿಯಲ್ಲಿ ಶಾಲೆಗಳ ಆರಂಭದ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನಗಳು ಆಗಲಿವೆ. ನಾಳಿನ ಸಭೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳು ಪಾಲ್ಗೊಳ್ಳುವರು. ಇವರೆಲ್ಲರ ಜತೆ ಚರ್ಚಿಸಿ ಮುಖ್ಯಮಂತ್ರಿಗಳು ಶಾಲಾ ಆರಂಭದ ಬಗ್ಗೆ ತೀರ್ಮಾನಕೈಗೊಳ್ಳುವರು.
ರಾಜ್ಯದಲ್ಲಿ ಡಿಸೆಂಬರ್‌ನಲ್ಲಿ ಶಾಲೆಗಳನ್ನು ಪುನರಾರಂಭಿಸಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿವೆಯಾದರೂ ಶಾಲೆಗಳ ಪುನರಾರಂಭದ ತೀರ್ಮಾನವನ್ನು ಮುಖ್ಯಮಂತ್ರಿಗಳಿಗೆ ಬಿಡಲಾಗಿದೆ. ಆತುರದ ತೀರ್ಮಾನಗಳನ್ನು ಕೈಗೊಳ್ಳುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಾಗಲೇ ಹೇಳಿದ್ದಾರೆ. ಎಲ್ಲವನ್ನೂ ಸಮಗ್ರವಾಗಿ ಚರ್ಚಿಸಿದ ನಂತರವೇ ತೀರ್ಮಾನಗಳಾಗುತ್ತವೆ ಎಂದವರು ಹೇಳಿದ್ದು, ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ವಿದ್ಯಾಗಮ ಕಾರ್ಯಕ್ರಮವನ್ನು ಆರಂಭಿಸುವ ಬಗ್ಗೆಯೂ ನಾಳೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಈ ಹಿಂದೆಯೇ ಹೇಳಿದ್ದರು.
ರಾಜ್ಯದಲ್ಲಿ ಈಗಾಗಲೇ ಕಳೆದ ೧೭ ರಿಂದ ಪದವಿ ಕಾಲೇಜುಗಳು ಆರಂಭವಾಗಿದ್ದು, ಕಾಲೇಜುಗಳು ಆರಂಭವಾದ ೩-೪ ದಿನಗಳಲ್ಲೆ ಸುಮಾರು ೮೯ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕೊರೊನಾ ದೃಢಪಟ್ಟಿದೆ.
ಈ ಪರಿಸ್ಥಿತಿಯಲ್ಲಿ ಶಾಲೆಗಳ ಪುನರಾರಂಭ ಸೂಕ್ತವೇ ಎಂಬ ಪ್ರಶ್ನೆಗಳು ಮೂಡಿದ್ದು, ಶಾಲೆಗಳ ಆರಂಭದ ಬಗ್ಗೆ ಸರ್ಕಾರದ ತೀರ್ಮಾನ ಏನಾಗಲಿದೆ ಎಂಬುದು ಕುತೂಹಲ ಮೂಡಿಸಿದೆ.
ಈ ಹಿಂದೆ ಗ್ರಾಮೀಣ ಭಾಗದಲ್ಲಿ ವಿದ್ಯಾಗಮ ಕಾರ್ಯಕ್ರಮ ಆರಂಭವಾದ ನಂತರ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಂಣಿಸಿಕೊಂಡಿದ್ದರಿಂದ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ರಾಜ್ಯದಲ್ಲಿ ಕಾಲೇಜುಗಳು ಆರಂಭವಾದರೂ ಕೊರೊನಾ ಭೀತಿಯಿಂದ ಹೆಚ್ಚಿನ ವಿದ್ಯಾರ್ಥಿಗಳು ಕಾಲೇಜುಗಳತ್ತ ಮುಖ ಮಾಡಿಲ್ಲ. ಕಾಲೇಜುಗಳಲ್ಲೂ ಹಾಜರಾತಿ ಕಡಿಮೆ ಇದೆ. ಹೀಗಿರುವಾಗ ಶಾಲೆಗಳು ಆರಂಭವಾದರೆ ವಿದ್ಯಾರ್ಥಿಗಳು ಶಾಲೆಗೆ ಬರುತ್ತಾರೆಯೇ ಇಲ್ಲವೇ ಎಂಬ ಬಗ್ಗೆಯೂ ಚರ್ಚೆಗಳು ನಡೆದಿವೆ.
ಈ ಎಲ್ಲ ಹಿನ್ನೆಲೆಯಲ್ಲಿ ಶಾಲೆಗಳ ಆರಂಭದ ಬಗ್ಗೆ ಸರ್ಕಾರದ ತೀರ್ಮಾನ ಏನಾಗಲಿದೆ ಎಂಬುದು ನಾಳೆ ಸಭೆಯಲ್ಲಿ ನಿರ್ಧಾರವಾಗಲಿದೆ.