ಶಾಸಕ ಪ್ರಿಯಾಂಕ್ ಖರ್ಗೆಯವರಿಗೆ ಜೀವ ಬೆದರಿಕೆ: ಉದ್ರಿಕ್ತ ಕಾಂಗ್ರೆಸ್ಸಿಗರಿಂದ ಪೋಲಿಸ್ ಭವನಕ್ಕೆ ಮುತ್ತಿಗೆ

ಕಲಬುರಗಿ,ನ.12: ಚಿತ್ತಾಪುರ ಮೀಸಲು ಕ್ಷೇತ್ರದ ಶಾಸಕರೂ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ಪ್ರಿಯಾಂಕ್ ಖರ್ಗೆಯವರಿಗೆ ತಿರುಗೇಟು ನೀಡುವ ಭರದಲ್ಲಿ ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಅವರು ನೀವು ಶೂಟ್ ಮಾಡಿ, ಇಲ್ಲವೇ ನಾವು ಶೂಟ್ ಮಾಡುತ್ತೇವೆ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉದ್ರಿಕ್ತರಾಗಿ ಶನಿವಾರ ಪೋಲಿಸ್ ಭವನಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಪ್ರಿಯಾಂಕ್ ಖರ್ಗೆಯವರಿಗೆ ಮಣಿಕಂಠ್ ರಾಠೋಡ್ ಅವರು ಬಹಿರಂಗವಾಗಿಯೇ ಕೊಲೆ ಮಾಡುವ ಬೆದರಿಕೆ ಹಾಕಿದ್ದಾರೆ. ಅವರ ವಿರುದ್ಧ ಅನೇಕ ಪೋಲಿಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಕೂಡಲೇ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನೆಕಾರರು ಒತ್ತಾಯಿಸಿದರು.
ಶಾಸಕ ಪ್ರಿಯಾಂಕ್ ಖರ್ಗೆಯವರು ವಿರೋಧ ಪಕ್ಷದ ಮುಖಂಡರಾಗಿ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ರಾಜ್ಯ ಸರ್ಕಾರದಲ್ಲಿನ ಭ್ರಷ್ಟಾಚಾರವನ್ನು ಹೊರಗೆ ಹಾಕುತ್ತಿದ್ದಾರೆ. ಇದನ್ನು ಸಹಿದೇ ಬಿಜೆಪಿ ಮುಖಂಡರು ಅವರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಅವರು ದೂರಿದರು.
ಈ ಹಿಂದೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆಯವರಿಗೆ ಎರಡು ಬಾರಿ ಜೀವ ಬೆದರಿಕೆ ಕರೆಗಳು ಬಂದವು. ಆ ಕುರಿತು ದೂರು ಸಲ್ಲಿಸಲಾಗಿತ್ತು. ಆದಾಗ್ಯೂ, ಅವರಿಗೆ ಯಾವುದೇ ಭದ್ರತೆ ಕೊಡಲಿಲ್ಲ. ಈಗ ಅವರ ಪುತ್ರ ಪ್ರಿಯಾಂಕ್ ಖರ್ಗೆಯವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಇಶಾ ಪಂತ್ ಅವರಿಗೆ ಮನವಿ ಪತ್ರ ಸಲ್ಲಿಸಿದ ಪ್ರತಿಭಟನೆಕಾರರು, ಕೂಡಲೇ ಮಣಿಕಂಠ್ ರಾಠೋಡ್ ಅವರಿಗೆ ಬಂಧಿಸಬೇಕು ಹಾಗೂ ಶಾಸಕ ಪ್ರಿಯಾಂಕ್ ಖರ್ಗೆಯವರಿಗೆ ಸೂಕ್ತ ರಕ್ಷಣೆ ಕೊಡಬೇಕು. ಇಲ್ಲದೇ ಹೋದಲ್ಲಿ ನವೆಂಬರ್ 14ರಂದು ಜಿಲ್ಲೆಗೆ ಆಗಮಿಸುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಎಚ್ಚರಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಉತ್ತರ ಕ್ಷೇತ್ರದ ಶಾಸಕಿ ಶ್ರೀಮತಿ ಕನಿಜ್ ಫಾತಿಮಾ, ರಾಜ್ಯ ವಿಧಾನ ಪರಿಷತ್ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ್, ಆಲಂಖಾನ್, ಮಾಜಿ ಸಚಿವ ರೇವು ನಾಯಕ್ ಬೆಳಮಗಿ, ಸಂತೋಷ್ ಪಾಟೀಲ್ ಧನ್ನೂರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಲತಾ ರವಿ ರಾಠೋಡ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯ ರವಿ ರಾಠೋಡ್, ಶರಣಕುಮಾರ್ ಮೋದಿ, ಬಾಂಬೆ ಶೇಠ್ (ಲಾಲ್ ಅಹ್ಮದ್), ಸುಭಾಷ್ ರಾಠೋಡ್, ಅರುಣಕುಮಾರ್ ಪಾಟೀಲ್, ನೀಲಕಂಠರಾವ್ ಮೂಲಗೆ, ಮಾಜಿ ಮೇಯರ್ ಶ್ರೀಮತಿ ಚಂದ್ರಿಕಾ ಪರಮೇಶ್ವರ್, ರಾಜೇಶ್ ಗುತ್ತೇದಾರ್, ದೇವೆಂದ್ರ ಸಿನ್ನೂರ್, ಲಚ್ಚಪ್ಪ ಜಮಾದಾರ್, ಜೆ.ಎಂ. ಕೊರಬು ಸೇರಿದಂತೆ ಅನೇಕ ಮುಖಂಡರು ಹಾಗೂ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.