
ಬೆಂಗಳೂರು,ಮಾ.೩೧:ಕಾಂಗ್ರೆಸ್‌ನತ್ತ ಮತ್ತಿಬ್ಬರು ಶಾಸಕರು ಮುಖ ಮಾಡಿದ್ದು, ಒಂದೇ ದಿನ ಇಬ್ಬರು ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಸೇರ್ಪಡೆಯಾಗಲು ಬಿಜೆಪಿಯ ಕೂಡ್ಲಗಿ ಶಾಸಕ ಎನ್.ವೈ, ಗೋಪಾಲಕೃಷ್ಣ ಹಾಗೂ ಜೆಡಿಎಸ್‌ನ ಅರಕಲಗೂಡು ಶಾಸಕ ಎ.ಟಿ. ರಾಮಸ್ವಾಮಿ ಇವರುಗಳು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಸಿರಸಿಯಲ್ಲಿರುವ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಇಂದು ಭೇಟಿ ಮಾಡಿದ್ದ ಎನ್.ವೈ ಗೋಪಾಲಕೃಷ್ಣ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಎ.ಟಿ. ರಾಮಸ್ವಾಮಿ ಅವರು ವಿಧಾನಸೌಧದಲ್ಲಿಂದು ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು,
ಗುಬ್ಬಿಯ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನಿನ್ನೆ ಕಾಂಗ್ರೆಸ್ ಸೇರಿದ್ದರು. ಇದರ ಬೆನ್ನಲ್ಲೆ ಇಂದು ಬಿಜೆಪಿಯ ಎನ್.ವೈ ಗೋಪಾಲಕೃಷ್ಣ ಹಾಗೂ ಎ.ಟಿ. ರಾಮಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇವರುಗಳು ಸದ್ಯದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಸಂಬಂಧ ಎನ್.ವೈ. ಗೋಪಾಲಕೃಷ್ಣ ಹಾಗೂ ಎ.ಟಿ. ರಾಮಸ್ವಾಮಿ ಇವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಈಗಾಗಲೇ ಮಾತುಕತೆ ನಡೆಸಿದ್ದು, ಕಾಂಗ್ರೆಸ್ ಸೇರ್ಪಡೆಗೆ ಒಪ್ಪಿಗೆ ಸಿಕ್ಕ ನಂತರ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಸೇರಲಿರುವ ಎನ್.ವೈ. ಗೋಪಾಲಕೃಷ್ಣ ಅವರು ಚಿತ್ರದುರ್ಗದ ಮೊಣಕಾಲ್ಮೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಎ.ಟಿ. ರಾಮಸ್ವಾಮಿ ಅವರ ಅರಕಲಗೂಡಿನಿಂದ ಕಾಂಗ್ರೆಸ್‌ನಿಂದ ಕಣಕ್ಕಿಳಿಯಲಿದ್ದಾರೆ.
ಗೋಪಾಲಕೃಷ್ಣ ಅವರು ಮೂಲತಃ ಕಾಂಗ್ರೆಸ್ ಪಕ್ಷದವರಾಗಿದ್ದು, ೪ ಬಾರಿ ಶಾಸಕರಾಗಿದ್ದರು. ೨೦೧೮ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಅವರು ಬಿಜೆಪಿ ಸೇರಿ ಬಳ್ಳಾರಿಯ ಕೂಡ್ಲಗಿಯಿಂದ ಸ್ಪರ್ಧಿಸಿ ಗೆದ್ದಿದ್ದರು.

ರಾಮಸ್ವಾಮಿ ಹೇಳಿಕೆ’
ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿ ಹೊರ ಬಂದ ರಾಮಸ್ವಾಮಿ ಅವರು, ವಿಧಾನಸೌಧ ಮೆಟ್ಟಿಲಿಗೆ ನಮಸ್ಕಾರ ಮಾಡಿ, ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಸಂತೋಷದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಶಾಸಕನಾಗಲು ಅವಕಾಶ ಮಾಡಿಕೊಟ್ಟ ಜೆಡಿಎಸ್‌ಗೆ ಧನ್ಯವಾದ. ನಾನು ಜೆಡಿಎಸ್ ಬಿಟ್ಟೆ ಎಂದು ಎಲ್ಲೂ ಹೇಳಿಲ್ಲ. ಜೆಡಿಎಸ್‌ನವರೇ ನನ್ನನ್ನು ಹೊರ ಹಾಕಿದರು. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದೇ ನನಗೆ ಮುಳುವಾಯಿತು ಎಂದರು.