ಶಾ, ಸೋಮಣ್ಣ ವಿರುದ್ಧ ಕಾಂಗ್ರೆಸ್ ದೂರು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರವಾಗುತ್ತದೆ ಎಂದು ರಾಜ್ಯದ ಮತದಾರರಿಗೆ ಬೆದರಿಕೆ ಒಡ್ಡಿರುವ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರು ಸಲ್ಲಿಸಿದರು.

ಬೆಂಗಳೂರು,ಏ.೨೭:ವಿಧಾನಸಭೆ ಚುನಾವಣೆ ಕಾವೇರುತ್ತಿದ್ದಂತೆ ರಾಜಕೀಯ ಪಕ್ಷಗಳು ದೂರು -ಪ್ರತಿ ದೂರನ್ನು ದಾಖಲಿಸುತ್ತಿದ್ದು, ಚುನಾವಣಾ ಆಯೋಗಕ್ಕೆ ದೂರುಗಳು ಸಲ್ಲಿಕೆಯಾಗುತ್ತಿದ್ದು, ಕಾಂಗ್ರೆಸ್ ಪಕ್ಷ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಸತಿ ಸಚಿವ ವಿ. ಸೋಮಣ್ಣ ವಿರುದ್ಧ ದೂರು ಸಲ್ಲಿಸಿದೆ.
ರಾಜ್ಯ ಕಾಂಗ್ರೆಸ್‌ನ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇವರುಗಳು ಇಂದಿ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಅಮಿತ್ ಶಾ ಮತ್ತು ಚಾಮರಾಜನಗರ ಹಾಗೂ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮಣ್ಣ ವಿರುದ್ಧ ದೂರು ನೀಡಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ಆಯೋಜಿಸಿದ್ದ ರ್‍ಯಾಲಿಯಲ್ಲಿ ದ್ವೇಷ ಹಾಗೂ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ದೂರು ದಾಖಲಿಸಿದೆ.ಕೇಂದ್ರ ಗೃಹ ಸಚಿವ ಅಮಿತ್ ಶಾರವರು ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಘರ್ಷಣೆ, ಗಲಭೆಗಳು ಹೆಚ್ಚಾಗುತ್ತವೆ ಎಂದು ಮಾತನಾಡುತ್ತಾರೆ. ಇದು ದ್ವೇಷದ ಭಾಷಣವಾಗಿದೆ ಹಾಗೂ ಪ್ರಚೋದನಕಾರಿ ಮಾತಾಗಿದೆ ಎಂದು ಕಾಂಗ್ರೆಸ್ ನಾಯಕರು ದೂರು ನೀಡಿ ದ್ವೇಷ ಹಾಗೂ ಪ್ರಚೋಚದನಕಾರಿ ಭಾಷಣ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಕೋರಿದ್ದಾರೆ.
ಸೋಮಣ್ಣ ವಿರುದ್ಧವೂ ದೂರು
ಚಾಮರಾಜನಗರ ಮತ್ತು ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಸಚಿವ ಸೋಮಣ್ಣ ಅವರು ಚಾಮರಾಜನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಆಮಿಷವೊಡ್ಡಿ ನಾಮಪತ್ರ ವಾಪಸ್ ಪಡೆಯುವಂತೆ ಕೋರಿದ್ದಾರೆ. ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಇವರ ವಿರುದ್ಧವೂ ಕ್ರಮ ಜರುಗಿಸುವಂತೆ ದೂರಿನಲ್ಲಿ ಕೋರಿದ್ದಾರೆ.
ಸುರ್ಜೇವಾಲಾ ಹೇಳಿಕೆ
ದೂರು ಸಲ್ಲಿಸಿದ ನಂತರ ಮಾತನಾಡಿದ ರಣದೀಪ್‌ಸಿಂಗ್ ಸುರ್ಜೇವಾಲಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೂರು ನೀಡಿದ್ದೇವೆ. ತಕ್ಷಣವೇ ಎಫ್‌ಐಆರ್ ದಾಖಲಿಸಿ ಅವರನ್ನು ಬಂಧಿಸುವಂತೆ ಮನವಿ ಮಾಡಿದ್ದೇವೆ ಎಂದರು.
ಅಮಿತ್ ಶಾ ಅವರ ಹೇಳಿಕೆಯ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸುತ್ತೇವೆ. ಕಾನೂನಿನಂತೆ ಕ್ರಮಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೂ ಒತ್ತಾಯಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಹೇಳಿದರು.
ಕರ್ನಾಟಕ ಶಾಂತಿಯ ತೋಟ ಅದಕ್ಕೆ ಧಕ್ಕೆ ತರುವ ಕೆಲಸವನ್ನು ಅಮಿತ್ ಶಾ ಮಾಡುತ್ತಿದ್ದಾರೆ ಎಂದೂ ಅವರು ದೂರಿದರು.