ಶಿಕ್ಷಕರಿಗೆ ಮಾಸ್ಟರ್ ಕೋಚ್ ತರಬೇತಿ

ಲಕ್ಷ್ಮೇಶ್ವರ,ಜು.23: ತಾಲೂಕಿನ ಬಟ್ಟೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಗದಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರುಗಳ ಸಹಯೋಗದಲ್ಲಿ 1 ಬಿಎಂ ಮತ್ತು ಕ್ವಿಸ್ಟ್ ಅಲೈನ್ಸ್ ಸಂಸ್ಥೆಗಳ ಬೆಂಬಲಿತ ಮತ್ತು ಎಐಎಫ್ ಅನುಷ್ಠಾನದ ಫಾರ್ ಗರ್ಲ್ಸ್ ಭಾಗವಾಗಿ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳ ವಿಜ್ಞಾನ ಮತ್ತು ಗಣಿತ ವಿಷಯಗಳ ಶಿಕ್ಷಕರಿಗೆ ಮಾಸ್ಟರ್ ಕೋಚ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಂ.ಮುಂದಿನಮನಿಯವರು ಆಧುನಿಕ ಶಿಕ್ಷಣ ಮತ್ತು ತಂತ್ರಜ್ಞಾನಗಳ ಬಳಕೆಯಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದ್ದು ಶಿಕ್ಷಕರು ಬದಲಾದ ಶಿಕ್ಷಣ ವ್ಯವಸ್ಥೆಗೆ ಹೊಂದಿಕೊಳ್ಳಬೇಕು ಎಂದರು.
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ವಿಶಾಲಾಕ್ಷಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಗದಗ ಜಿಲ್ಲೆಯ ಎಲ್ಲ ಸರ್ಕಾರಿ ಪ್ರೌಢಶಾಲೆಗಳಲ್ಲಿ ಮಾಹಿತಿ ಮತ್ತು ತಂತ್ರಜ್ಞಾನದ ಅರಿವನ್ನು ಮಕ್ಕಳಲ್ಲಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡು “ಸ್ಟೆಮ್ಸ್ ಫಾರ್ ಗರ್ಲ್ಸ್” ಕಾರ್ಯಕ್ರಮ ಕಲಿಕೆಗೆ ಪೂರಕವಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿ ಈಶ್ವರ ಮೆಡ್ಲೇರಿಯವರು ಮಾತನಾಡಿ ಗಣಿತ ಮತ್ತು ವಿಜ್ಞಾನ ಶಿಕ್ಷಕರಿಗೆ ಮಾಸ್ಟರ್ ಕೋಚ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿ ಎಲ್ಲರನ್ನೂ ಸ್ವಾಗತಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಿ.ಬಿ. ಪಾಟೀಲ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿ.ಎಸ್. ಭಜಂತ್ರಿ ಸೇರಿದಂತೆ ಸಿ.ಆರ್.ಪಿ ಮತ್ತು ಬಿ.ಆರ್.ಸಿಗಳು ಭಾಗವಹಿಸಿದ್ದರು.