ಶಿಕ್ಷಕರು ಕಲಿಸುವ ಪಾಠ ಬದುಕಿಗೆ ಬುನಾದಿ

ಬ್ಯಾಡಗಿ,ಸೆ6: ಪ್ರತಿಯೊಬ್ಬರ ಬಾಳಿನಲ್ಲೂ ಗುರುಗಳ ಪಾತ್ರ ಬಹಳ ಹಿರಿದಾಗಿದ್ದು, ಶಾಲೆಯಲ್ಲಿ ಶಿಕ್ಷಕ-ಶಿಕ್ಷಕಿಯರು ಕಲಿಸುವ ಪಾಠ, ನೀಡುವ ಮಾರ್ಗದರ್ಶನ ಸುಂದರ ಬದುಕಿಗೆ ಬುನಾದಿಯಾಗಿದೆ ಎಂದು ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಹೇಳಿದರು.
ಪಟ್ಟಣದ ಶ್ರೀಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ದಿನಾಚರಣೆ ಸಮಿತಿಯ ಸಂಯುಕ್ತಾಶ್ರಯದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 134ನೇ ಜಯಂತಿಯ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅತ್ಯುತ್ತಮ ಶಿಕ್ಷಕರು ಪುಸ್ತಕದಿಂದಲ್ಲ, ಹೃದಯದಿಂದ ಕಲಿಸುತ್ತಾರೆ. ಶಿಕ್ಷಕರು ಎಂದರೆ ಪ್ರತಿಯೊಂದು ಸಂದರ್ಭದಲ್ಲೂ ಜೀವಮಾನವಿಡೀ ವಿದ್ಯಾರ್ಥಿಗಳ ಬದುಕಿನಲ್ಲಿ ನೆರಳಾಗಿ ನಿಲ್ಲುವವರು ಎಂದು ತಿಳಿಸಿದರಲ್ಲದೇ, ತಮಗೂ ಸಹ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಶಿಕ್ಷಣದೊಂದಿಗೆ ಮಾರ್ಗದರ್ಶನ ನೀಡಿದ ಗುರುಗಳನ್ನು ಸ್ಮರಿಸಿದರು.
ಉಪನ್ಯಾಸಕ ಎಚ್.ಬಿ.ಪಂಚಾಕ್ಷರಯ್ಯ ಮಾತನಾಡಿ, ನಮ್ಮ ಭವಿಷ್ಯದ ಜೀವನಕ್ಕೊಂದು ಸುಂದರ ಅಡಿಪಾಯ ಹಾಕಿಕೊಡುವ ಶಿಕ್ಷಕರಿಗೆ ಸದಾ ಋಣಿಯಾಗಿರುವುದು ಕೂಡಾ ನಮ್ಮ ಕರ್ತವ್ಯ. ಇಂತಹ ಗುರುಗಳಿಗೆ ಮೀಸಲಾದ ದಿನವೇ `ಶಿಕ್ಷಕರ ದಿನಾಚರಣೆ’. ನಮ್ಮ ದೇಶದಲ್ಲಿ ಪ್ರತಿವರ್ಷ ಸೆಪ್ಟೆಂಬರ್ 5ನ್ನು ಶಿಕ್ಷಕರ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಆದರ್ಶ ಶಿಕ್ಷಕ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಸ್ಮರಣೆಯಾಗಿ ಈ ದಿನವನ್ನು ಆಚರಿಸಲಾಗುತ್ತಿದೆ. ಇತ್ತೀಚಿಗಿನ ದಿನಗಳಲ್ಲಿ ಶೈಕ್ಷಣಿಕ ವ್ಯವಸ್ಥೆಯು ಆಧುನಿಕ ತಂತ್ರಜ್ಞಾನದೊಂದಿಗೆ ಬೆಳೆಯುತ್ತಿದ್ದು, ವಿದ್ಯಾರ್ಥಿಗಳು ಕೂಡ ತಮ್ಮ ಕಲಿಕಾ ಕೌಶಲ್ಯವನ್ನು ಅಳವಡಿಸಿಕೊಂಡು ಶೈಕ್ಷಣಿಕವಾಗಿ ಅಭಿವೃದ್ದಿ ಹೊಂದಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪ್ರಶಸ್ತಿ ವಿಜೇತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಆರ್.ಪಾಟೀಲ, ಪುರಸಭಾಧ್ಯಕ್ಷೆ ಸರೋಜಾ ಉಳ್ಳಾಗಡ್ಡಿ, ಉಪಾಧ್ಯಕ್ಷೆ ಗಾಯತ್ರಿ ರಾಯ್ಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ ಪಾಟೀಲ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಮಲ್ಲಿಕಾರ್ಜುನ, ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ.ಬೆನಕೊಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಮಲ್ಲೇಶ ಹುಲ್ಯಾಳ, ಪುರಸಭೆಯ ಸದಸ್ಯರು ಸೇರಿದಂತೆ ಶಿಕ್ಷಕರ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಶಿಕ್ಷಕ ಬಳಗದವರು ಉಪಸ್ಥಿತರಿದ್ದರು.