ಶಿಕ್ಷಕರ ಕೊರತೆ ನೀಗಿಸಲು ಕ್ರಮ

(ಸಂಜೆವಾಣಿ ಪ್ರತಿನಿಧಿಯಿಂದ)
ಬೆಂಗಳೂರು, ಜು. ೧೦- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ೧೩,೫೦೦ ಶಿಕ್ಷಕರ ನೇಮಕ ಪ್ರಕ್ರಿಯೆ ನ್ಯಾಯಾಲಯದಲ್ಲಿದ್ದು, ಅದನ್ನು ತೆರವುಗೊಳಿಸಿ ಶೀಘ್ರ ವಿದ್ಯಾರ್ಥಿಗಳ ಸಮಸ್ಯೆ ಮತ್ತು ಶಿಕ್ಷಕರ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನಪರಿಷತ್‌ನಲ್ಲಿಂದು ಹೇಳಿದರು.ಇಂದೂ ಕೂಡಾ ರಾಜ್ಯದ ಅಡ್ವೋಕೇಟ್ ಜನರಲ್ ಅವರೊಂದಿಗೆ ಇಲಾಖೆ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಹೈಕೋರ್ಟ್‌ನಲ್ಲಿರುವ ತಡೆಯಾಜ್ಞೆಯನ್ನು ತೆರವುಗೊಳಿಸಿ ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.ಪ್ರಶ್ನೋತ್ತರ ಅವಧಿಯಲ್ಲಿ ಅಬ್ದುಲ್ ಜಬ್ಬಾರ್ ಮತ್ತು ಮಂಜುನಾಥ್ ಭಂಡಾರಿ ಅವರ ಎರಡು ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರ ನೀಡಿದ ಸಚಿವರು, ಸರ್ಕಾರ ೧೫ ಸಾವಿರ ಹುದ್ದೆಗಳಿಗೆ ಸರ್ಕಾರ ಮಂಜೂರಾತಿ ನೀಡಿತ್ತು. ಅದರಲ್ಲಿ ೧೩,೫೦೦ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದೆ ಸದ್ಯ ಈ ಪ್ರಕರಣ ನ್ಯಾಯಾಲಯದಲ್ಲಿದೆ. ಅದನ್ನು ತೆರವುಗೊಳಿಸಿದ ನಂತರ ಖಾಲಿ ಇರುವ ಹುದ್ದೆಗಳಿಗೆ ನಿಯೋಜನೆ ಮಾಡಲಾಗುವುದು ಎಂದರು.
ನಿರ್ದೇಶನ
ರಾಜ್ಯದಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಿಥಿಲವಾಗಿರುವ ಸರ್ಕಾರಿ ಶಾಲಾ ಕೊಠಡಿಗಳನ್ನು ತುರ್ತಾಗಿ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
ಇದರ ಜತೆಗೆ ರಾಜ್ಯದ ಯಾವೆಲ್ಲಾ ಕಡೆ ಹೆಚ್ಚುವರಿ ಕೊಠಡಿಗಳ ಅಗತ್ಯವಿದೆಯೋ ಅವುಗಳ ನಿರ್ಮಾಣಕ್ಕೂ ಆದ್ಯತೆ ನೀಡಲಾಗುವುದು. ಈ ಮೂಲಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹಿತರಕ್ಷಣೆ ಸರ್ಕಾರದ ಆಧ್ಯತೆ ಎಂದು ಅವರು ತಿಳಿಸಿದರು.

ಸಮವಸ್ತ್ರ, ಶೂ ವಿತರಣೆ
ರಾಜ್ಯದಲ್ಲಿ ೧ ರಿಂದ ೧೦ನೇ ತರಗತಿಯ ಎಲ್ಲ ಸರ್ಕಾರಿ ಶಾಲಾ ಮಕ್ಕಳಿಗೆ ೨೦೨೩-೨೪ನೇ ಸಾಲಿನಲ್ಲಿ ಶೇ. ೮೩ ರಷ್ಟು ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶೂ ಮತ್ತು ಸಾಕ್ಸ್‌ಗಳನ್ನು ವಿತರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನಪರಿಷತ್‌ನಲ್ಲಿಂದು ಹೇಳಿದರು.
ಇನ್ನುಳಿದ ಶೇ. ೧೭ರಷ್ಟು ಸಮವಸ್ತ್ರ ಮತ್ತು ಶೂ, ಸಾಕ್ಸ್‌ಗಳನ್ನು ಈ ತಿಂಗಳಾಂತ್ಯದೊಳಗೆ ಪೂರೈಕೆ ಮಾಡಲಾಗುವುದು ಎಂದರು.
ಮಂಜುನಾಥ್ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಕ್ಕಳ ಶೂ, ಸಾಕ್ಸ್ ಖರೀದಿಗೆ ಈಗಾಗಲೇ ೧೨೫ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ವಿದ್ಯಾ ವಿಕಾಸ ಯೋಜನೆಯಡಿ ೧ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ಮುದ್ರಿಸಿ ಶಾಲೆಗಳಿಗೆ ಸರಬರಾಜು ಮಾಡಲಾಗಿದೆ ಎಂದರು.
ರಾಜ್ಯದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿರುವ ೧೩ ಸಾವಿರ ಶಿಕ್ಷಕರ ಹುದ್ದೆ ಸಂಬಂಧದ ಅಡೆತಡೆಗಳನ್ನು ನಿಭಾಯಿಸಿ ಅವರನ್ನು ಭರ್ತಿ ಮಾಡಿಕೊಳ್ಳಲಾಗುವುದು. ಇದರ ಜತೆಗೆ ಸಂಗೀತ, ಚಿತ್ರಕಲೆ ಸೇರಿದಂತೆ ವಿಶೇಷ ಶಿಕ್ಷಕರ ನೇಮಕಕ್ಕೂ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ರಾಜ್ಯದ ಸರ್ಕಾರಿ ಪ್ರೌಢಶಾಲೆಯಲ್ಲಿ ೬ ಅಥವಾ ೬ಕ್ಕಿಂತ ಹೆಚ್ಚು ವಿಭಾಗವರುವ ಶಾಲೆಗಳಿಗೆ ವಿಶೇಷ ಶಿಕ್ಷಕರ ಹುದ್ದೆಯನ್ನು ಮಂಜೂರು ಮಾಡಲಾಗಿದೆ. ಅದರಂತೆ ರಾಜ್ಯದಲ್ಲಿ ೨೩೨೮ ಹುದ್ದೆಗಳು ಮಂಜೂರಾಗಿದ್ದು, ೧೨೫೩ ಮಂದಿ ವಿಶೇಷ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನೂ ೧೦೭೫ ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.