ಶಿಕ್ಷಕರ ಸಮಸ್ಯೆಗೆ ಕೂಡಲೇ ಪರಿಹಾರ ಕಂಡುಕೊಳ್ಳಿ: ಅಧಿಕಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಸೂಚನೆ

ಬೀದರ್ ಜ.22: ಧರ್ಮಾಪೂರ ಗ್ರಾಮದಲ್ಲಿರುವ ಶಿಕ್ಷಕರ ಕೊರತೆಯನ್ನು ಕೂಡಲೇ ನಿವಾರಿಸಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಸೂಚಿಸಿದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಧರ್ಮಾಪೂರ ಗ್ರಾಮದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳ ನಡೆ – ಹಳ್ಳಿ ಕಡೆ (ಗ್ರಾಮ ವಾಸ್ತವ್ಯ) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮದಲ್ಲಿ ಶಿಕ್ಷಕರ ಕೊರತೆಯಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕೂಡಲೇ ಕೊರತೆ ನಿವಾರಣೆಗೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮದಲ್ಲಿ ಅಕ್ರಮವಾಗಿ ಸರಾಯಿ ಮಾರಾಟ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕೂಡಲೇ ಅಕ್ರಮ ಸರಾಯಿ ಮಾರಾಟ ತಡೆಗಟ್ಟಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಗ್ರಾಮದಲ್ಲಿ ಕೆಲವು ಸಿಸಿ ರಸ್ತೆಗಳು ಆಗಬೇಕಾಗಿದೆ. ಅಂಗನವಾಡಿ ಕಟ್ಟಡ ದುರಸ್ತಿ ಮಾಡಬೇಕಾಗಿದೆ. ಶಾಲೆ ಕಟ್ಟಡ, ಪಂಚಾಯತಿ ಕಟ್ಟಡಗಳು ದುರಸ್ತಿಗೆ ಬಂದಿವೆ ಅವುಗಳನ್ನು ಸರಿ ಪಡಿಸಿ ಎಂದು ಶಾಸಕರಿಗೆ ಗ್ರಾಮಸ್ಥರು ಮನವಿ ಮಾಡಿದರು.

ಹಂತಹಂತವಾಗಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುತ್ತೇನೆ. ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ತಿಳಿಸಿದರು. ಇದೇ ವೇಳೆ ಶಾಸಕರ ಸಮ್ಮುಖದಲ್ಲಿ ವಿವಿಧ ಯೋಜನೆಗಳ ಪ್ರಮಾಣ ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬೀದರ್ ತಹಶಿಲ್ದಾರರು, ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಮುಖಂಡರು ಸೇರಿದಂತೆ ಅನೇಕರಿದ್ದರು.