
ಗೌರಿಬಿದನೂರು,ಸೆ.೭-ಸಮಾಜದ ಎಲ್ಲ ಕ್ಷೇತ್ರಗಳಲ್ಲಿನ ವೃತ್ತಿಗಿಂತ ಶಿಕ್ಷಕ ವೃತ್ತಿಯು ಅತ್ಯಂತ ಪಾವಿತ್ರ್ಯತೆಯುಳ್ಳದ್ದಾಗಿದ್ದು ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ರೂಪಿಸುವ ಮೂಲಕ ಅದರ ಮೌಲ್ಯವನ್ನು ಶಿಕ್ಷಕರು ಕಾಪಾಡಬೇಕಾಗಿದೆ ಎಂದು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ತಿಳಿಸಿದರು.
ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ ’ ಶಿಕ್ಷಕರ ದಿನಾಚರಣೆ’ ಯನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವನ್ನು ರೂಪುಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿರುತ್ತದೆ. ಅವರು ತಮ್ಮ ವೃತ್ತಿ ಬದುಕಿನಲ್ಲಿ ಸಾವಿರಾರು ಮಂದಿಯ ಪಾಲಿಗೆ ನಿಜವಾದ ನಾಯಕರಾಗಿರುತ್ತಾರೆ. ಅಂತಹ ವೃತ್ತಿಯಲ್ಲಿರುವ ನಾವೆಲ್ಲರೂ ವಿದ್ಯಾರ್ಥಿಗಳಿಗೆ ಪಠ್ಯ ವಿಷಯಗಳ ಜತೆಗೆ ಜಗತ್ತಿನಲ್ಲಿ ನಡೆಯುವ ವಿದ್ಯಮಾನಗಳ ಸಾಮಾನ್ಯ ಜ್ಞಾನದ ಬಗ್ಗೆ ತಿಳಿಸುವ ಮೂಲಕ ಅವರನ್ನು ಸ್ಪರ್ಧಾತ್ಮಕ ಜಗತ್ತನ್ನು ಎದುರಿಸುವಂತೆ ಸಿದ್ಧಗೊಳಿಸುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.
ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಯೂನಿವರ್ಸಿಟಿ ಕಾಲೇಜ್ ಆಪ್ ಎಜುಕೇಶನ್ ಕಾಲೇಜಿನ ಪ್ರಾಂಶುಪಾಲೆ ಸಿ.ಎಂ.ಲೀಲಾವತಿ ಕಾರ್ಯಕ್ರಮದ ಪ್ರಧಾನ ಭಾಷಣಾಕಾರರಾಗಿ ಭಾಗವಹಿಸಿ, ಸಮಾಜದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅದಕ್ಕೆ ಪೂರಕವಾದ ಮೌಲ್ಯಗಳನ್ನು ಉಳಿಸಿ ಬೆಳೆಸಿಕೊಳ್ಳುವ ಪ್ರಯತ್ನ ನಾವೆಲ್ಲರೂ ಮಾಡಬೇಕಾಗಿದೆ. ಸಮಾಜದಲ್ಲಿನ ಅನೇಕ ದಾರ್ಶನಿಕರು ಮತ್ತು ತತ್ವಜ್ಞಾನಿಗಳು ತರಗತಿಗಳಲ್ಲಿ ಪಾಠ ಪ್ರವಚನಗಳನ್ನು ಮಾಡದಿದ್ದರೂ ದೇಶಕ್ಕೆ ಅದ್ಭುತ ಶಿಕ್ಷಕರಾಗಿ ರೂಪುಗೊಂಡಿದ್ದಾರೆ. ಶಿಕ್ಷಕರು ತರಗತಿಯಲ್ಲಿ ಮಕ್ಕಳಿಗೆ ಕೇವಲ ಶಿಕ್ಷಣವನ್ನು ಮಾತ್ರ ಕಲಿಸದೆ ದೇಶಭಕ್ತಿ, ಪ್ರೀತಿ, ವಾತ್ಸಲ್ಯ, ಶಿಸ್ತು, ಸಂಯಮ ಸೇರಿದಂತೆ ಇತರ ಮೌಲ್ಯಾಧಾರಿತ ಗುಣಗಳನ್ನು ಕಲಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಮೂಲಕ ಸಮಾಜದ ಸ್ವಾಸ್ಥ್ಯ ಮತ್ತು ಸಾಮರಸ್ಯಕ್ಕೆ ಶ್ರಮಿಸಬೇಕಾಗಿದೆ. ಪ್ರತೀ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಸಮಾಜದಲ್ಲಿ ಬದುಕುವ ಶಕ್ತಿಯನ್ನು ಕಲಿಸಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮಹೇಶ್ ಎಸ್.ಪತ್ರಿ, ತಾ.ಪಂ ಇಒ ಆರ್.ಹರೀಶ್, ನಗರಸಭೆ ಆಯುಕ್ತೆ ಡಿ.ಎಂ.ಗೀತಾ, ಬಿಇಒ ಕೆ.ವಿ.ಶ್ರೀನಿವಾಸಮೂರ್ತಿ, ಕ್ಷೇತ್ರ ಸಮನ್ವಯಾಧಿಕಾರಿ ಜಿ.ಗಂಗರೆಡ್ಡಿ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರಾದ ಎನ್.ನರಸಿಂಹಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಡಿ.ಎನ್.ಮಧುಸೂದನರೆಡ್ಡಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎಂ.ಶಿವಣ್ಣ, ಕೇಂದ್ರಿಯ ವಿದ್ಯಾಲಯದ ಪ್ರಾಂಶುಪಾಲೆ ಆಕಾಂಕ್ಷ ಶರ್ಮ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ರೆಡ್ಡಪ್ಪ, ಸೇರಿದಂತೆ ಇತರರು ಭಾಗವಹಿಸಿದ್ದರು.