ಶಿಕ್ಷಣ, ಆರೋಗ್ಯ ಕ್ಷೇತ್ರದ ಬಲವರ್ಧನೆಗೆ ಕ್ರಮ: ಸಿಎಂ

ಬೆಳಗಾವಿ, ಜೂ.5: ಕೋವಿಡ್ ಸಮರ್ಪಕ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆಗೆ ಸರಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳ ಬಲವರ್ಧನೆಗೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಕೋವಿಡ್ ನಿರ್ವಹಣೆ ಹಾಗೂ ಇತರೆ ಅಭಿವೃದ್ಧಿ ವಿಷಯಗಳ ಕುರಿತು ಸುವರ್ಣ ವಿಧಾನ ಸೌಧದಲ್ಲಿಂದು ನಡೆದ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಳಗಾವಿ ಜಿಲ್ಲೆಯ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆಗಳನ್ನು ಒದಗಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆಯ ಸಚಿವರ ಜತೆ ಚರ್ಚಿಸಿ ಸೂಚನೆಯನ್ನು ನೀಡಲಾಗಿದೆ.
ಕೋವಿಡ್ ನಿರ್ವಹಣೆ ಸೇರಿದಂತೆ ಜಿಲ್ಲೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಶಾಸಕರು ಜಿಲ್ಲೆಯ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಚರ್ಚಿಸಿ ಸ್ಥಳೀಯವಾಗಿ ಬಗೆಹರಿಸಿಕೊಳ್ಳುವುದು ಪರಿಣಾಮಕಾರಿ ಯಾಗಲಿದೆ. ಆದ್ದರಿಂದ ಏನೇ ಅಹವಾಲು ಅಥವಾ ಸಮಸ್ಯೆಗಳು ಇದ್ದರೆ ಉಸ್ತುವಾರಿ ಸಚಿವರ ಜತೆ ಚರ್ಚಿಸಬೇಕು ಎಂದರು.
ಪ್ರವಾಹ ಸಂದರ್ಭದಲ್ಲಿ ಹಾನಿಗೊಳಗಾದ ಮನೆಗಳ ನಿರ್ಮಾಣಕ್ಕೆ ಬಿಡುಗಡೆಯಾದ ಹಣ ಬಳಸಿಕೊಂಡು ಸರ್ಟಿಫಿಕೇಟ್ ನೀಡಿದರೆ 24 ಗಂಟೆಗಳಲ್ಲಿ ನಂತರದ ಕಂತು ಬಿಡುಗಡೆ ಮಾಡಲಾಗುವುದು ಎಂದರು.
ಬಿಮ್ಸ್ ಗೆ ಆಡಳಿತಾಧಿಕಾರಿ ನೇಮಕ:
ಕೋವಿಡ್ ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ಒದಗಿಸುವುದು ಸೇರಿದಂತೆ ಆಡಳಿತಾತ್ಮಕ ಸುಧಾರಣೆಗೆ ಅನುಕೂಲವಾಗುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್)ಯ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಭೆಯಲ್ಲಿ ಪ್ರಕಟಿಸಿದರು.
ಬಿಮ್ಸ್ ಅಗತ್ಯ ಸಿಬ್ಬಂದಿಯ ನೇಮಕಾತಿಗಾಗಿ ಈಗಾಗಲೇ ಅನುಮತಿಯನ್ನು ನೀಡಲಾಗಿದೆ.
20 ಕೆ.ಎಲ್. ಆಕ್ಸಿಜನ್ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲಾ ಆಸ್ಪತ್ರೆಗಳ ಮೂಲ ಸೌಕರ್ಯಗಳನ್ನು ಒದಗಿಸಲು ಸರಕಾರ ಬದ್ಧವಿದೆ ಎಂದು ತಿಳಿಸಿದರು.
ಉಪ ಮುಖ್ಯಮಂತ್ರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ತಾಲ್ಲೂಕು ಆಸ್ಪತ್ರೆಗಳಲ್ಲಿ ಇರುವ ವೆಂಟಿಲೇಟರ್ ಗಳ ಬಳಕೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಇಲಾಖೆಯ ಸಚಿವರಾದ ಲಕ್ಷ್ಮಣ ಸವದಿ ಅವರು, ಸಂಭವನೀಯ ಮೂರನೇ ಅಲೆಯ ವೇಳೆ ಉಂಟಾಗುವ ಸಮಸ್ಯೆ ಎದುರಿಸಲು ಎಂಟು ಲಕ್ಷ ವೆಚ್ಚದಲ್ಲಿ ಆಕ್ಸಿಜನ್ ಬೆಡ್ ಸೌಲಭ್ಯ ಹೊಂದಿರುವ ಬಸ್ ಗಳನ್ನು ಸಜ್ಜುಗೊಳಿಸಲಾಗಿದೆ.
ತುರ್ತು ಚಿಕಿತ್ಸೆಗೆ ಅನುಕೂಲವಾಗುವಂತೆ ಶಾಸಕರು ಹಾಗೂ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿದಿಯಡಿ ತಾಲ್ಲೂಕುಗಳಲ್ಲಿ ಇಂತಹ ಬಸ್ ಸೌಲಭ್ಯಗಳನ್ನು ಕಲ್ಪಿಸಬಹುದು.
ಸಂಸದರು ಹಾಗೂ ಶಾಸಕರು ಈ ಬಗ್ಗೆ ಚಿಂತನೆ ನಡೆಸಬೇಕು ಎಂದು ಸವದಿ ಹೇಳಿದರು.
ಬೆಳಗಾವಿಗೆ 144 ವೈದ್ಯರ ನೇಮಕಾತಿ:
ಜಿಲ್ಲೆಗೆ ಏಳು ಆಕ್ಸಿಜನ್ ಘಟಕಗಳನ್ನು ಮುಖ್ಯಮಂತ್ರಿಗಳು ಮಂಜೂರು ಮಾಡಿರುತ್ತಾರೆ. ಆದಷ್ಟು ಬೇಗನೇ ಈ ಘಟಕಗಳು ಕಾರ್ಯಾರಂಭಿಸಲಿವೆ ಎಂದು ಆರೋಗ್ಯ ಇಲಾಖೆಯ ಸಚಿವರಾದ ಡಾ.ಕೆ.ಸುಧಾಕರ್ ತಿಳಿಸಿದರು.
ಜಿಲ್ಲೆಗೆ ಒಟ್ಟು 144 ವೈದ್ಯರನ್ನು ನೇಮಿಸಲಾಗಿದೆ. ಇದರಲ್ಲಿ 54 ಜನರು ತಜ್ಞರನ್ನು ನಿಯೋಜಿಸಲಾಗಿದೆ.
ದೇಶದಲ್ಲಿ ಅತೀ ಹೆಚ್ಚು ಕೋವಿಡ್ ಪರೀಕ್ಷೆಯನ್ನು ರಾಜ್ಯದಲ್ಲಿ ಮಾಡಲಾಗುತ್ತಿದ್ದು, ಇದುವರೆಗೆ ಮೂರು ಕೋಟಿ ಮಾದರಿ ಪರೀಕ್ಷೆ ಮಾಡಲಾಗಿದೆ ಎಂದರು.
ಜೂನ್ ಅಂತ್ಯಕ್ಕೆ 58 ಲಕ್ಷ ಲಸಿಕೆ ಪೂರೈಕೆ:
ಕರ್ನಾಟಕ ರಾಜ್ಯಕ್ಕೆ ಜೂನ್ ಅಂತ್ಯದ ವೇಳೆಗೆ 58 ಲಕ್ಷ ಲಸಿಕೆಗಳು ಪೂರೈಕೆಯಾಗಲಿವೆ. ಆಗ ಲಸಿಕೆ ಕೊರತೆಯ ಸಮಸ್ಯೆ ಪರಿಹಾರಗೊಳ್ಳಲಿದೆ ಎಂದು ಡಾ.ಸುಧಾಕರ್ ಹೇಳಿದರು.
ಗೃಹಸಚಿವರಾದ ಬಸವರಾಜ ಬೊಮ್ಮಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರಾದ ಉಮೇಶ್ ಕತ್ತಿ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀಮಂತ ಪಾಟೀಲ, ಜನಪ್ರತಿನಿಧಿಗಳು , ಜಿಲ್ಲಾಧಿಕಾರಿ, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.