ಶಿಕ್ಷಣ ಇಲಾಖೆಯಲ್ಲಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ;ಭರವಸೆ

ಶಿವಮೊಗ್ಗ, ಜ. ೫; ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ, ಸ್ಥಳೀಯವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾದ ಹಾಗೂ ಇಲಾಖೆಯಲ್ಲಿನ ಜ್ವಲಂತ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹಾರ ಕಂಡುಕೊಳ್ಳಲು ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಸಭೆಯನ್ನು ಏರ್ಪಡಿಸಿ, ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಕೋರಿಕೆಯ ಮೇರೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರಸಾಬ್ ಸಭಾಂಗಣದಲ್ಲಿ ಸೋಮವಾರ ಸಭೆಯನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ನೂತನವಾಗಿ ಸೇವೆಗೆ ನಿಯುಕ್ತರಾದ ಶಿಕ್ಷಕರ ಖಾಯಂ ಪೂರ್ವ ಸೇವಾವಧಿ ತೃಪ್ತಿಕರವಾಗಿರುವ ಬಗ್ಗೆ ಆದೇಶ ಹೊರಡಿಸುವ, ಶಿಕ್ಷಕರ ಮೇಲೆ ಬಹುದಿನಗಳಿಂದ ಬಾಕಿ ಇರುವ ಇಲಾಖಾ ವಿಚಾರಣೆ ಬಾಕಿ, ನಿವೃತ್ತ ಶಿಕ್ಷಕರ ಸೌಲಭ್ಯಗಳನ್ನು ನೀಡದಿರುವುದು, ವೈದ್ಯಕೀಯ ವೆಚ್ಚದ ಮರುಪಾವತಿ, ವೇತನ ವಿಳಂಬ ಮುಂತಾದ ಸಮಸ್ಯೆಗಳು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿಯೂ ಬಾಕಿ ಇರುವುದು ಬೇಸರ ಸಂಗತಿಯಾಗಿದೆ. ಗುರುಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಸರ್ಕಾರ ಅಗತ್ಯವಾಗಿರುವ ಅನುದಾನವನ್ನು ಬಿಡುಗಡೆ ಮಾಡಿದ್ದು,. ಜಿಲ್ಲಾ ಉಸ್ತುವಾರಿ ಸಚಿವರ ದಿನಾಂಕ ಪಡೆದು, ಕೂಡಲೇ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದ ಅವರು, ಶಿಕ್ಷಕರ ಮುಂಬಡ್ತಿಗೆ ಸಂಬಂಧಿಸಿದ ಕಡತಗಳನ್ನು ಕೂಡಲೇ ವಿಲೇ ಮಾಡುವಂತೆ ಮನವಿ ಮಾಡಿದರು.ಸಭೆಯಲ್ಲಿ ಜಿಪಂ ಸಿಇಓ ಎಂ.ಎಲ್.ವೈಶಾಲಿ, ಡಯಟ್ ಪ್ರಾಂಶುಪಾಲ ಬಿ.ಆರ್.ಬಸವರಾಜು, ನೌಕರರ ಸಂಘದ ಬೆಂಗಳೂರು ವಿಭಾಗದ ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್‍ಕುಮಾರ್ ಸೇರಿದಂತೆ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, ಶಿಕ್ಷಕರ ಸಂಘದ ಎಲ್ಲಾ ತಾಲೂಕುಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.