ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಅಧಿಕಾರಿಗಳಿಗೆ ಬಿಎಸ್ ವೈ ಸೂಚನೆ

ಬೆಂಗಳೂರು,ನ. 11-ರಾಜ್ಯದಲ್ಲಿ ದೌರ್ಜನ್ಯ ಪ್ರತಿಬಂಧ ಅಧಿನಿಯಮದಡಿ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕೇವಲ ಶೇ. 5 ರಿಂದ 6 ರಷ್ಟಿವೆ. ಶಿಕ್ಷೆಯ ಪ್ರಮಾಣ ಹೆಚ್ಚಿಸಲು ವ್ಯಾಜ್ಯ ಮತ್ತು ಅಭಿಯೋಗ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯು ದೌರ್ಜನ್ಯ ಪ್ರತಿಬಂಧ ಅಧಿನಿಯಮದಡಿ ಏರ್ಪಡಿಸಿದ್ದ ರಾಜ್ಯಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯಲ್ಲಿ ಇಂದು ಮಾತನಾಡಿದರು.

ಎಲ್ಲಾ ಪೊಲೀಸ್ ಅಧಿಕಾರಿಗಳು ದೌರ್ಜನ್ಯ ಪ್ರಕರಣಗಳಲ್ಲಿ ಎಫ್.ಐ.ಆರ್. ದಾಖಲಿಸಬೇಕು ಮತ್ತು ಸಂಬಂಧಿಸಿದ ಕಲಂಗಳನ್ನು
ಅನುಮೋದಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿಗಳಿಂದ 60 ದಿನಗಳೊಳಗೆ ತನಿಖೆ ಮುಗಿಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಬಗ್ಗೆ ಕ್ರಮವಹಿಸಲು ಮತ್ತು ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಜಾಗರೂಕತೆ ವಹಿಸಬೇಕು. ಅಲ್ಲದೇ ಸಾಕ್ಷಿದಾರರು ಮತ್ತು ಸಂತ್ರಸ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ದೂರು ಸಲ್ಲಿಸುವ ಸಂದರ್ಭವನ್ನೂ ವಿಡಿಯೋ ರೆಕಾರ್ಡಿಂಗ್ ಮಾಡಲು ಕ್ರಮ ಕೈಗೊಳ್ಳಬೇಕೆಙದು ಪೊಲೀಸ್ ಇಲಾಖೆಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಪ್ರಸ್ತುತ ದೌರ್ಜನ್ಯ ಪ್ರತಿಬಂಧ ಅಧಿನಿಯಮದ ಅಡಿ ದಾಖಲಾಗುವ ಪ್ರಕರಣಗಳಲ್ಲಿ ಪಂಚನಾಮೆ ಮತ್ತು ಸಾಕ್ಷಿಗಳ ಹೇಳಿಕೆ ದಾಖಲಿಸುವ ಸಂದರ್ಭದಲ್ಲಿ ವಿಡಿಯೋ ರೆಕಾರ್ಡಿಂಗ್ ನಡೆಸಲಾಗುತ್ತಿದೆ. ದೂರು ಸಲ್ಲಿಸಲು ಬಂದ ಸಂತ್ರಸ್ತರ ಹಾದಿ ತಪ್ಪಿಸುವ ಸಾಧ್ಯತೆಗಳನ್ನು ತಪ್ಪಿಸಲು ದೂರು ನೀಡುವ ಸಂದರ್ಭದಲ್ಲಿಯೂ ವಿಡಿಯೋ ರೆಕಾರ್ಡಿಂಗ್ ನಡೆಸುವಂತೆ ಎಲ್ಲ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡಿದರು.

ಪರಿಶಿಷ್ಟ ಜಾತಿ/ ಪಂಗಡಗಳ ಕಾಲೋನಿಗಳಲ್ಲಿ, ತಾಂಡಾ ಗಳಲ್ಲಿ ಕನಿಷ್ಠ 100 ಪಡಿತರ ಚೀಟಿದಾರರು ಇದ್ದಲ್ಲಿ ನ್ಯಾಯಬೆಲೆ ಅಂಗಡಿಗಳನ್ನು ಸ್ಥಾಪಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.

ದೌರ್ಜನ್ಯಕ್ಕೆ ಒಳಪಟ್ಟ ಸಂತ್ರಸ್ತರಿಗೆ ನಿಯಮಾನುಸಾರ ಪರಿಹಾರ ಧನವನ್ನು ನೀಡಲಾಗುತ್ತಿದೆ. ಪ್ರಸ್ತುತ ಸಾಲಿನಲ್ಲಿ 30 ಕೋಟಿ ರೂ.ಗಳ ಅನುದಾನವನ್ನು ಒದಗಿಸಿದ್ದು, ಈ ಪೈಕಿ 15 ಕೋಟಿ ರೂ.ಗಳ ಅನುದಾನವನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ. ದೌರ್ಜನ್ಯಕ್ಕೆ ಒಳಗಾದವರಿಗೆ ನಿಗದಿತ ಸಮಯದೊಳಗೆ ಪರಿಹಾರ ನೀಡಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಮತ್ತು ಉಪ ವಿಭಾಗೀಯ ಮಟ್ಟದಲ್ಲಿ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳು ಮತ್ತು ಸಹಾಯಕ ಆಯುಕ್ತರು ಕಡ್ಡಾಯವಾಗಿ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸುವಂತೆಯೂ ಮುಖ್ಯಮಂತ್ರಿಗಳು ಸೂಚಿಸಿದರು.