ಶಿವಕುಮಾರ ವಿರುದ್ಧ ನಿಂದನೆ: ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕಲಬುರಗಿ.ಮಾ.28:ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಅವಾಚ್ಯವಾಗಿ ನಿಂದಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಕೂಡಲೇ ಕಾನೂನಿನ ಅಡಿಯಲ್ಲಿ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಒತ್ತಾಯಿಸಿ ಭಾನುವಾರ ನಗರದಲ್ಲಿ ಪ್ರತಿಭಟನೆ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಿಂದ ಅನ್ನಪೂರ್ಣ ಕ್ರಾಸ್ ಮೂಲಕ ಸಾರ್ವಜನಿಕ ಉದ್ಯಾನವನದಲ್ಲಿರುವ ಟೌನ್ ಹಾಲ್ ಮುಂದಿರುವ ಮಹಾತ್ಮಾ ಗಾಂಧಿ ಪ್ರತಿಮೆಯ ಮುಂದೆ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್ ಅವರು ಮಾತನಾಡಿ, ಕೆಪಿಸಿಸಿಐ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಿಡಿ ಪ್ರಕರಣದ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ನಿಂದಿಸಿರುವ ಕ್ರಮವನ್ನು ಬಲವಾಗಿ ಖಂಡಿಸಿದರು.
ಮಾಜಿ ಸಚಿವರು ರಾಸಲೀಲೆಯಲ್ಲಿ ತೊಡಗಿರುವ ಕುರಿತು ಸ್ವತ: ಸಂತ್ರಸ್ತ ಯುವತಿಯೇ ಹೇಳಿದ್ದಾಳೆ. ಇಡೀ ಪ್ರಕರಣವನ್ನು ಮುಚ್ಚಿ ಹಾಕುವ ಕುರಿತು ಆ ಯುವತಿಯೇ ಬಹಿರಂಗವಾಗಿಯೇ ಆರೋಪಿಸಿದ್ದಾಳೆ. ಆದಾಗ್ಯೂ, ಪ್ರಕರಣದ ಕುರಿತು ತನಿಖೆಗೆ ಮುಂದಾಗದೇ ಕೆಪಿಸಿಸಿಐ ಅಧ್ಯಕ್ಷರಿಗೆ ಅತ್ಯಂತ ಅವಾಚ್ಯವಾಗಿ ನಿಂದಿಸುವ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ತಮ್ಮ ಕೀಳು ಮಟ್ಟದ ಸ್ವಭಾವವನ್ನು ಪ್ರದರ್ಶಿಸಿದ್ದಾರೆ ಎಂದು ಅವರು ಆರೋಪಿಸಿದರು.
ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಆರೋಪಿ ರಮೇಶ್ ಜಾರಕಿಹೊಳಿ ಅವರಿಗೆ ರಕ್ಷಣೆ ಕೊಡಬಾರದು ಎಂದು ಆಗ್ರಹಿಸಿದ ಅವರು, ಯುವತಿಯು ಈಗಾಗಲೇ ರಮೇಶ್ ಜಾರಕಿಹೊಳಿ ಅವರು ತನ್ನ ಮೇಲೆ ನಡೆಸಿದ ಅತ್ಯಾಚಾರ ಹಾಗೂ ದೌರ್ಜನ್ಯ, ದಬ್ಬಾಳಿಕೆಯ ಕುರಿತು ನ್ಯಾಯಾಧೀಶರ ಮುಂದೆ ವಿವರಿಸುವುದಾಗಿ ಹೇಳಿದ್ದಾಳೆ. ಆದ್ದರಿಂದ ಆ ಯುವತಿಗೆ ರಕ್ಷಣೆ ಕೊಡುವ ಮೂಲಕ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಲು ರಾಜ್ಯ ಸರ್ಕಾರವು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಕೂಡಲೇ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಿ, ಗಡಿಪಾರು ಮಾಡಬೇಕು ಎಂದು ಅವರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಗದೇವ್ ಗುತ್ತೇದಾರ್ ಕಾಳಗಿ, ರಾಜ್ಯ ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ್, ಮಾಜಿ ಮೇಯರ್ ಶರಣಕುಮಾರ್ ಮೋದಿ, ಈರಣ್ಣ ಝಳಕಿ ಮುಂತಾದವರು ಪಾಲ್ಗೊಂಡಿದ್ದರು.