ಶಿವರಾಮೇಗೌಡ ವಿರುದ್ಧ ಜೆಡಿಎಸ್ ಪ್ರತಿಭಟನೆ

ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಹಾಗೂ ಇದಕ್ಕೆ ಕುಮ್ಮಕ್ಕು ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ, ಮಾಜಿ ಶಾಸಕ ಹೆಚ್.ಎಂ. ರಮೇಶ್ ಗೌಡ ಅವರ ನೇತೃತ್ವದಲ್ಲಿ ಇಂದು ನಗರದ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸಲಾಯಿತು. ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಬೆಂಗಳೂರು, ಮೇ.೨೦- ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ವಿರುದ್ಧವಾಗಿ ವೈಯಕ್ತಿಕ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ ಆರ್ ಶಿವರಾಮೇಗೌಡ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ನಗರದಲ್ಲಿಂದು ಫ್ರೀಡಂ ಪಾರ್ಕಿನ ಮೈದಾನದಲ್ಲಿ ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಬೆಂಗಳೂರು ಅಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಜಮಾಯಿಸಿದ ಜೆಡಿಎಸ್ ನಾಯಕರು, ರಾಜ್ಯ ಕಾಂಗ್ರೆಸ್ ದುರಾಡಳಿತ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪಿತೂರಿ ಹಾಗೂ ಕುಮ್ಮಕ್ಕಿನಿಂದ ಎಲ್ ಆರ್ ಶಿವರಾಮೇಗೌಡ, ದೇವೇಗೌಡ ವಿರುದ್ಧವಾಗಿ ವೈಯಕ್ತಿಕವಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಆರೋಪಿಸಿದರು.
ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸಾವು ಬಯಸುವ ಎಲ್ ಆರ್ ಶಿವರಾಮೇಗೌಡ ಅವರದ್ದು ಹೀನ ಸಂಸ್ಕೃತಿ.ಎಲ್ ಆರ್ ಶಿವರಾಮೇಗೌಡ ಮಾತಾಡುವಾಗ ಸಭ್ಯತೆ ಮರೆಯೋದು ಹೊಸದೇನಲ್ಲ, ಕೇಡು ಬಯಸಿ ಆಡಿರುವ ಮಾತಿನ ಆಡಿಯೋ ವೈರಲ್ ಆಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಪೆನ್‌ಡ್ರೈವ್ ಸೋರಿಕೆ ಮಾಡಿದವರ ಬಗ್ಗೆ ಏಕೆ ತನಿಖೆಯಾಗುತ್ತಿಲ್ಲ? ಇದರಲ್ಲಿ ಯಾರ ಪಾತ್ರ ಇದೆ ಎಂಬುದನ್ನು ಪತ್ತೆ ಹಚ್ಚಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿರುವುದು ಸರ್ಕಾರದ ಕರ್ತವ್ಯ. ಪಾರದರ್ಶಕ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.