‘ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಿ’

ಮಂಗಳೂರು, ನ.೧೨- ಕರಾವಳಿ ಭಾಗದಲ್ಲಿ ಅದರಲ್ಲೂ ದ.ಕ. ಜಿಲ್ಲೆಯಲ್ಲಿ ಪ್ರಮುಖ ಹೆದ್ದಾರಿಗಳು ಹದಗೆಟ್ಟಿದ್ದು, ಸಂಚಾರಕ್ಕೆ ಸಂಚಕರವೆನಿಸಿವೆ. ಇದೀಗ ವಾಹನ ಸವಾರರ ಅಳಲು ದ.ಕ. ಜಿಲ್ಲಾಧಿಕಾರಿಗಳ ಮನಮುಟ್ಟಿದೆ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಬೇಕಾಗುವ ರೀತಿಯಲ್ಲಿ ಹೆದ್ದಾರಿಗಳ ಕಾಮಗಾರಿಗಳನ್ನು ನಡೆಸುವಂತೆ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅವರು ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾರ್ಯಗಳ ಕಾಮಗಾರಿಗಳನ್ನು ವಿಳಂಬ ಮಾಡದೇ ಆದ್ಯತೆಯ ಮೇಲೆ ಕೈಗೊಂಡು ಸಾರ್ವಜನಿಕರ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ. ಅಡ್ಡದಹೊಳೆಯಿಂದ -ಬಂಟ್ವಾಳದವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಿಸಲು ೧೭ ಗ್ರಾಮಗಳು ಒಳಗೊಂಡಂತೆ ೩೫ ಹೆಕ್ಟೇರ್ ಜಮೀನನ್ನು ೬೮೦ ಮಂದಿ ಖಾತೆದಾರರಿಂದ ಸ್ವಾಧೀನಪಡಿಸಿಕೊಳ್ಳಲಾಗಿದೆ. ಮಾಲೀಕರಿಗೆ ಭೂಸ್ವಾಧೀನದ ಪ್ರಕ್ರಿಯೆಯಂತೆ ೩ಜಿ ಅವಾರ್ಡ್‌ಗಳನ್ನು ೧೦ ದಿನದ ಒಳಗೆ ಸಹಾಯಕ ಆಯುಕ್ತರು ಹಾಗೂ ಎನ್.ಹೆಚ್ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಪೂರ್ಣಗೊಳಿಸಬೇಕೆಂದು ತಿಳಿಸಿದರು. ಮಾಣಿಯಿಂದ ಬಿ.ಸಿ ರೋಡ್ ಜಂಕ್ಷನ್‌ವರೆಗಿನ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚುವ ಕಾಮಗಾರಿಗಳನ್ನು ಈ ತಿಂಗಳ ನವೆಂಬರ್ ೩೦ರ ಒಳಗೆ ಪೂರ್ಣಗೊಳಿಸಬೇಕೆಂದು ಎನ್.ಹೆಚ್.ಎ.ಐ ಯೋಜನಾ ನಿರ್ದೇಶಕರಿಗೆ ಸೂಚಿಸಿದ ಅವರು, ಗುಂಡ್ಯ-ಅಡ್ಡಹೊಳೆ ರಸ್ತೆಗಳ ಗುಂಡಿಗಳನ್ನು ಸಹ ಮುಚ್ಚುವ ಕಾರ್ಯ ಕೈಗೊಳ್ಳಬೇಕೆಂದು ತಿಳಿಸಿದರು. ರಸ್ತೆ ದುರಸ್ಥಿ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಕಚ್ಚಾ ವಸ್ತುಗಳನ್ನು ಎಮ್.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಪೂರೈಕೆ ಮಾಡಿಕೊಳ್ಳಬೇಕೆಂದು ಸೂಚನೆ ನೀಡಿದರು. ಮಾಣಿ ಮತ್ತು ಬಿ.ಸಿ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಾಗ ಯಾವುದೇ ರೀತಿಯ ಟ್ರಾಫಿಕ್ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕೆಂದು ಪೊಲೀಸ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.