ಸಂಜೆ ಖರ್ಗೆ ಜೊತೆ ಸಿಎಂ, ಡಿಸಿಎಂ ಚರ್ಚೆ

ಪರಿಷತ್ ಚುನಾವಣೆ

ನವದೆಹಲಿ,ಮೇ೨೯:ವಿಧಾನಸಭೆಯಿಂದ ವಿಧಾನ ಪರಿಷತ್‌ನ ೧೧ ಸ್ಥಾನಗಳಿಗೆ ಜೂ. ೧೩ ರಂದು ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ದೆಹಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇವರುಗಳು ಇಂದು ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸುವರು.
ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ವರಿಷ್ಠರ ಜತೆ ಚರ್ಚಿಸಲು ನಿನ್ನೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ದೆಹಲಿಯಲ್ಲೇ ಮೊಕ್ಕಾಂ ಹೂಡಿದ್ದಾರೆ. ನಿನ್ನೆ ಸಂಜೆ ಈ ಇಬ್ಬರು ನಾಯಕರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರ ಜತೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಿ ಪಟ್ಟಿಯೊಂದನ್ನು ಸಿದ್ಧಪಡಿಸಿದ್ದು, ಇಂದು ಸಂಜೆ ಈ ಪಟ್ಟಿಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಿದ್ದಾರೆ.
ಈ ಎಲ್ಲ ನಾಯಕರು ಕುಳಿತು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಿದ್ದು, ನಾಳೆ ಅಭ್ಯರ್ಥಿಗಳ ಆಯ್ಕೆಯನ್ನು ಹೈಕಮಾಂಡ್ ಪ್ರಕಟಿಸಲಿದೆ.
ಚುನಾವಣೆ ನಡೆಯುವ ೧೧ ಸ್ಥಾನಗಳ ಪೈಕಿ ವಿಧಾನಸಭೆಯ ಬಲಾಬಲದ ಪ್ರಕಾರ ಕಾಂಗ್ರೆಸ್‌ಗೆ ೭ ಸ್ಥಾನಗಳು ಸಿಗಲಿದ್ದು, ಈ ೭ಸ್ಥಾನಗಳಿಗೆ ೩೦೦ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇವರುಗಳು ತಮ್ಮದೇ ಆದ ಒಂದು ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಈ ಪಟ್ಟಿಯನ್ನು ಇಟ್ಟುಕೊಂಡು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರ ಜತೆ ಚರ್ಚೆ ನಡೆಸಿ ಅಂತಿಮವಾಗಿ ೭ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
ಬೋಸ್‌ರಾಜು ಯತೀಂದ್ರಗೆ ಟಿಕೆಟ್ ನಿಶ್ಚಿತ
೭ ಸ್ಥಾನಗಳ ಪೈಕಿ ೨ ಸ್ಥಾನಗಳಿಗೆ ರಾಜ್ಯದ ಸಣ್ಣ ನೀರಾವರಿ ಸಚಿವ ಬೋಸ್‌ರಾಜು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡುವುದು ಬಹುತೇಕ ನಿಶ್ಚಿತ. ಉಳಿದ ೫ ಸ್ಥಾನಗಳಿಗೆ ಇಂದು ಸಂಜೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುತ್ತದೆ.