ಸಂಜೆವಾಣಿ ವಾರ್ತೆ
ಸಿರುಗುಪ್ಪ, ಜೂ.30: ತಾಲ್ಲೂಕಿನ ಹಳೇಕೋಟೆ ಗ್ರಾಮದ ಆರಾಧ್ಯ ದೈವ ಶ್ರೀ ವೀರಭದ್ರೇಶ್ವರ ದೇವಸ್ಥಾನದ ನೂತನ ಕಟ್ಟಡ ಹಾಗೂ ಗರ್ಭಗುಡಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು.
ರೂ 5 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನೂತನ ದೇವಸ್ಥಾನ ಕಟ್ಟಡದ ನಿರ್ಮಾಣಕ್ಕೆ ಭೂಮಿಪೂಜೆಯನ್ನು ನೆಲಮಂಗಲ ತಾಲ್ಲೂಕಿನ ಶಿವಗಂಗಾ ಕ್ಷೇತ್ರದ ಶ್ರೀಮೇಲಣಗವಿ ವೀರಸಿಂಹಾಸನ ಸಂಸ್ಥಾನ ಮಠದ ಡಾ. ಮಲಯಶಾಂತಮುನಿ ಶಿವಾಚಾರ್ಯ ಸ್ವಾಮೀಜಿ ನೆರವೇರಿಸಿ ಆಶೀರ್ವಚನ ನೀಡಿದರು.
ಬೆಳಿಗ್ಗೆ 11 ಗಂಟೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪೂರ್ಣಕುಂಭ ಹೊತ್ತ ಸುಮಂಗಲೆಯರು ಹಾಗೂ ವೀರಗಾಸೆ ಕುಣಿತದ ಮೂಲಕ ಸ್ವಾಮೀಜಿಗಳನ್ನು ದೇವಸ್ಥಾನದ ವರೆಗೆ ಮೆರವಣಿಗೆ ಮೂಲಕ ಕರೆತರಲಾಯಿತು.
ಹಳೇಕೋಟೆ ಮರಿಸ್ವಾಮಿಮಠ ಮಲ್ಲಿಕಾರ್ಜುನ ಸ್ವಾಮಿಜೀ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ, ದೇವಸ್ಥಾನ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಗ್ರಾಮದ ಭಕ್ತಾದಿಗಳು ಇದ್ದರು.