ಸಂಪುಟ ವಿಸ್ತರಣೆ- ಅಸಮಾಧಾನ ಸಾಮಾನ್ಯ: ಸಚಿವ ಶೆಟ್ಟರ್

ಹುಬ್ಬಳ್ಳಿ, ಜ 14: ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಸಮಾಧಾನಗಳು ಭುಗಿಲೇಳುವುದು ಸಾಮಾನ್ಯ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಸಂಪುಟ ವಿಸ್ತರಣೆ ಮಾಡುವುದು ಮುಖ್ಯಮಂತ್ರಿಗಳ ಪರಮಾಧಿಕಾರವಗಿದ್ದು, ಕೆಲವರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಈ ರೀತಿ ಆಗುವುದು ಸಾಮಾನ್ಯ. ಪಕ್ಷದ ವರಿಷ್ಠರು ಎಲ್ಲರನ್ನು ಸಮಾಧಾನಪಡಿಸುವ ಕೆಲಸವನ್ನು ಮಾಡಲಿದ್ದಾರೆ ಎಂದರು.
ಎಚ್.ವಿಶ್ವನಾಥ ಸಿಡಿ ಬಹಿರಂಗಪಡಿಸುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ಆಂತರಿಕ ವಿಚಾರಗಳು ಏನೇ ಇದ್ದರೂ, ಅದನ್ನು ಪಕ್ಷದ ವರಿಷ್ಠರ ಜೊತೆ ಚರ್ಚೆ ಮಾಡಬೇಕು. ಬಹಿರಂಗವಾಗಿ ಹೇಳಿಕೆಗಳನ್ನು ನೀಡಬಾರದು. ಅಸಮಾಧಾನಗೊಂಡವರಿಗೆ ಪಕ್ಷದ ವರಿಷ್ಠರು ಸೂಕ್ತ ಸ್ಥಾನಮಾನ ನೀಡಲಿದ್ದಾರೆ ಎಂಬ ಭರವಸೆ ಇದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.