ಸಂವಿಧಾನ ಜಾಗೃತಿ ಜಾಥಾ: ಕುರುಗೋಡು ತಾಲ್ಲೂಕಿನಲ್ಲಿ ವಿವಿಧೆಡೆ ಸಂಚಾರ


ಬಳ್ಳಾರಿ,ಫೆ.12: ಜಿಲ್ಲೆಯಲ್ಲಿ “ಸಂವಿಧಾನ ಜಾಗೃತಿ ಜಾಥಾ” ಕಾರ್ಯಕ್ರಮವು ಯಶಸ್ವಿಯಾಗಿ ನಡೆಯುತ್ತಿದ್ದು, ಭಾನುವಾರದಂದು ಕುರುಗೋಡು ತಾಲ್ಲೂಕಿನ ಯರ್ರಂಗಳಿ, ಸಿದ್ದಮ್ಮನಹಳ್ಳಿ, ಏಳುಬೆಂಚಿ, ಬಾದನಹಟ್ಟಿ, ಸಿಂಧಿಗೇರಿ, ದಮ್ಮೂರು ಮತ್ತು ಕೋಳೂರು ಗ್ರಾಮ ಪಂಚಾಯಿತಿಗಳ ಮಾರ್ಗದಲ್ಲಿ ಸಂಚರಿಸಿತು.
ಸಂಚಾರದಲ್ಲಿ ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು  ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಸಂವಿಧಾನ ರಚನಾ ಸಭೆ ಹಾಗೂ ಸಂವಿಧಾನದ ಕುರಿತ ವೀಡಿಯೋ ತುಣುಕುಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಯಿತು.
ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ ಜಾಥಾದ ಉದ್ದಕ್ಕೂ ಸಂವಿಧಾನ ಪ್ರಸ್ತಾವನೆಯ ಪ್ರತಿಗಳನ್ನು ಹಂಚಿಕೆ ಮಾಡಲಾಯಿತು.
ಜಾಥಾವನ್ನು ಪ್ರತೀ ಗ್ರಾಮಗಳಲ್ಲಿಯೂ ಕಳಶ ಹಿಡಿದು, ಪೂರ್ಣ ಕುಂಭ ಹೊತ್ತ ಮಹಿಳೆಯರು, ನೇತಾರರ ವೇಷ ಭೂಷಣಗಳನ್ನು ಧರಿಸಿದ ವಿದ್ಯಾರ್ಥಿಗಳು, ಹಲಗೆ ಮತ್ತು ಡೊಳ್ಳು ಕಲಾವಿದರು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಗ್ರಾಮದ ಜನಪ್ರತಿನಿಧಿಗಳು, ಊರಿನ ಮುಖಂಡರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತಿಸಿದರು.
ಸಿದ್ದಮ್ಮನಹಳ್ಳಿ:
ಸಿದ್ದಮ್ಮನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥ ಸುಂಕಪ್ಪ ಅವರು ಮಾತನಾಡಿ, ರಾಜ್ಯ ಸರ್ಕಾರವು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ. ನಮ್ಮ ಸಂವಿಧಾನವು ಪ್ರಪಂಚದಲ್ಲಿಯೇ ದೊಡ್ಡ ಲಿಖಿತ ಸಂವಿಧಾನವಾಗಿದ್ದು, ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಆಡಳಿತ ವ್ಯವಸ್ಥೆ ಸುಸೂತ್ರವಾಗಿ ನಡೆಯಲು ಕಾರಣವಾಗಿದೆ ಎಂದು ಹೇಳಿದರು.
 ಬಾದನಹಟ್ಟಿ ಗ್ರಾಮ:
ಸಂವಿಧಾನ ಜಾಗೃತಿ ಜಾಥಾವು ಆಗಮಿಸಿದ ಹಿನ್ನಲೆಯಲ್ಲಿ ಬಾದನಹಟ್ಟಿ ಗ್ರಾಮದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಕೋಲಾಟದ ಮೂಲಕ ಹಾಗೂ ವಿವಿಧ ನೇತಾರರ ವೇಷಭೂಷಣಗಳ ಮೂಲಕ ಸಂವಿಧಾನ ಜಾಥಾವನ್ನು ಸ್ವಾಗತಿಸಿದ್ದು ವಿಶೇಷವಾಗಿತ್ತು.
ಇದೇ ಸಂದರ್ಭದಲ್ಲಿ ಬಾದನಹಟ್ಟಿ ಗ್ರಾಮದ ಮಾಜಿ ಗ್ರಾಪಂ ಸದಸ್ಯ ಗಾಳಿ ಬಸವರಾಜ ಅವರು ಮಾತನಾಡಿ, ಸಂವಿಧಾನ ಜಾಗೃತಿ ಜಾಥವನ್ನು ಹಮ್ಮಿಕೊಂಡಿರುವ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಗಳಿಗೆ ಧನ್ಯವಾದಗಳು. ಈ ಜಾಥಾದಿಂದಾಗಿ ವಿದ್ಯಾರ್ಥಿಗಳಿಗೆ ಹಾಗೂ ಜನ ಸಾಮಾನ್ಯರಿಗೆ ಸಂವಿಧಾನದ ಮಹತ್ವವನ್ನು ತಿಳಿಯಲು ಸಹಾಯಕವಾಗಿದೆ ಎಂದು ತಿಳಿಸಿದರು.
 ಸಿಂಧಿಗೇರಿ ಗ್ರಾಮ:
ಸಿಂಧಿಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ತಾಯಪ್ಪ ಅವರು ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿ ಕಾನೂನುಗಳ ಮೂಲಕ ದೇಶದ ಒಟ್ಟಾರೆ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಸಿಂಧಿಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು, ಅಂಗನವಾಡಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಸೇರಿ ಜಾಥಾವನ್ನು ಯಶಸ್ವಿಗೊಳಿಸಿದ್ದು, ಸಂತಸವಾಗಿದೆ ಎಂದು ತಿಳಿಸಿದರು.
 ದಮ್ಮೂರು ಗ್ರಾಮ:
ದಮ್ಮೂರು ಗ್ರಾಮದಲ್ಲಿ ಸ.ಹಿ.ಪ್ರಾ.ಶಾಲೆಯ ಶಿಕ್ಷಕಿ ಸುಜಾತಾ ಎಚ್.ಎಂ. ಅವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲರಿಗೂ ಸಮಾನತೆ ತಂದು ಕೊಟ್ಟಿದ್ದಾರೆ. ಅದಕ್ಕಾಗಿಯೇ ಅವರನ್ನು “ಸಂವಿಧಾನ ಶಿಲ್ಪಿ” ಎಂದು ಕರೆಯುತ್ತೇವೆ. ಸಂವಿಧಾನದಿಂದಾಗಿ ಪ್ರತಿಯೊಬ್ಬ ಸಾಮಾನ್ಯ ಪ್ರಜೆಯೂ ಯಾವುದೇ ಉನ್ನತ ಸ್ಥಾನಕ್ಕೆ ತಲುಪಬಹುದು. ಉದಾಹರಣೆಗೆ ಬುಡಕಟ್ಟು ಸಮುದಾಯದ ಸಾಮಾನ್ಯ ಮಹಿಳೆ ದ್ರೌಪದಿ ಮುರ್ಮು ಅವರು ಸಂವಿಧಾನ ಕಲ್ಪಿಸಿರುವ ಅವಕಾಶದಿಂದಾಗಿ ರಾಷ್ಟ್ರಪತಿ ಹುದ್ದೆ ಅಲಂಕರಿಸಿದ್ದಾರೆ ಎಂದು ತಿಳಿಸಿದರು.
 ಕೋಳೂರು ಗ್ರಾಮ:
ಕೋಳೂರು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಕು.ಹುಲಿಗೆಮ್ಮ ಮಾತನಾಡಿ, ಸಂವಿಧಾನದಿಂದಾಗಿ ಎಲ್ಲರಿಗೂ ಸಮಾನತೆ ದೊರೆತಿದೆ. ಆದ್ದರಿಂದ ನಮ್ಮಂತಹ ಹೆಣ್ಣು ಮಕ್ಕಳು ಇಂದು ಶಾಲೆಗೆ ಸೇರಿ ಇಲ್ಲಿ ಮಾತನಾಡಲು ಅವಕಾಶವಾಗಿದೆ. ಇಡೀ ಪ್ರಪಂಚದಲ್ಲಿಯೇ ಅತೀ ಹೆಚ್ಚು ಪ್ರಶಸ್ತಿ ಪಡೆದವರು ಡಾ.ಬಿ.ಆರ್.ಅಂಬೇಡ್ಕರ್ ಎಂದು ಹೇಳಿದರು.
ಕೋಳೂರು ಗ್ರಾಮದ ಗಾಂಧಿ ತತ್ವ ಆಧಾರಿತ ವಸತಿ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಿ.ಸಿಂಧು ಮಾತನಾಡಿ, ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ವಾಚನ ಮಾಡಲು ಆದೇಶಿಸಿರುವುದು ವಿದ್ಯಾರ್ಥಿಗಳಿಗೆ ಸಂವಿಧಾನದ ಮೌಲ್ಯಗಳನ್ನು ಅರಿಯಲು ಕಾರಣವಾಗಿದೆ ಎಂದು ತಿಳಿಸಿದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ವರ್ಗದವರು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯಿತಿಗಳ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.