ಸಂವಿಧಾನ ಜಾಗೃತಿ ಜಾಥಾ: ಸ್ತಬ್ಧಚಿತ್ರ ವಾಹನಕ್ಕೆ ಸಚಿವ ಡಿ.ಸುಧಾಕರ್ ಚಾಲನೆ


ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜ.೨೭;  ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಶುಕ್ರವಾರ ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧಚಿತ್ರ ವಾಹನಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ಭಾರತದ ಸಂವಿಧಾನ ಅಂಗೀಕರಿಸಿಕೊಂಡು 75 ವರ್ಷಗಳಾದ ಹಿನ್ನಲೆಯಲ್ಲಿ ಸರ್ಕಾರದ ವತಿಯಿಂದ “ಸಂವಿಧಾನ ಜಾಗೃತಿ ಜಾಥಾ”ಎಂಬ ಶೀರ್ಷಿಕೆಯಡಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ, ನಗರ ಸ್ಥಳೀಯ ಸಂಸ್ಥೆಗಳಿಗೆ ಸಂವಿಧಾನ ಜಾಗೃತಿ ಸ್ತಬ್ಧಚಿತ್ರ ಮೆರವಣಿಗೆ ಸಂಚರಿಸಲಿದೆ.ಫೆಬ್ರವರಿ  25ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ರಾಷ್ಟ್ರಮಟ್ಟದ ಬೃಹತ್ ಸಮಾವೇಶ ಕಾರ್ಯಕ್ರಮ ಆಯೋಜಿಸಲಾಗುವುದು. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಸಂವಿಧಾನ ಜಾಗೃತಿ ಸ್ಥಬ್ಧಚಿತ್ರ ಭಾಗವಹಿಸುವುದು. ಇದಕ್ಕೂ ಮುನ್ನಾ ಜನವರಿ 26 ರಿಂದ ಫೆಬ್ರವರಿ 23 ರವರೆಗೆ ಜಿಲ್ಲೆಯ ಎಲ್ಲಾ 189 ಗ್ರಾಮ ಪಂಚಾಯಿತಿ, 07 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ  ಸಂಚರಿಸಿ, ಸಂವಿಧಾನದ ಕುರಿತು ಜಾಗೃತಿ ಮೂಡಿಸಲಿದೆ. ಈ ಜಾಗೃತಿ ಜಾಥಾದಲ್ಲಿ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳು, ಮಹಿಳಾ ಸ್ವ-ಸಹಾಯ ಸಂಘಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಸಚಿವ ಡಿ.ಸುಧಾಕರ್ ಕೋರಿದರು.