ಸಂಸತ್ ಭವನ ಉದ್ಘಾಟನೆ:ಸುಪ್ರೀಂನಲ್ಲಿ ಅರ್ಜಿ ವಜಾ

ನವದೆಹಲಿ,ಮೇ.೨೬- ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡುವುದನ್ನು ವಿರೋಧಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ರಾಷ್ಡ್ರಪತಿ ದ್ರೌಪದಿ ಮುರ್ಮು ಅವರನ್ನು ಬದಿಗೆ ಸರಿಸಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನ ಉದ್ಘಾಟನೆಗೆ ಮುಂದಾಗಿರುವುದನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.
ಹೊಸ ಸಂಸತ್ ಕಟ್ಟಡವನ್ನು ಮೇ ೨೮ ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿ ಅಲ್ಲ ಎಂದು ನಿರ್ದೇಶನ ಕೋರಿ ಸಲ್ಲಿಸಲಾದ ಮನವಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಕಟ್ಟಡ ಉದ್ಘಾಟನೆ ಮಾಡಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಸೇರಿದಂತೆ ೨೦ಕ್ಕೂ ಹೆಚ್ಚು ವಿವಿಧ ಪಕ್ಷಗಳು ಉದ್ಘಾಟನಾ ಸಮಾರಂಭ ಬಹಿಷ್ಕರಿಸಲು ನಿರ್ಧರಿಸಿವೆ
ವಕೀಲರಾದ ಜಯ ಸುಕಿನ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಮೇ ೧೮ ರಂದು ಲೋಕಸಭೆಯ ಕಾರ್ಯದರ್ಶಿಗಳು ನೀಡಿದ ಹೇಳಿಕೆ ಮತ್ತು ಹೊಸ ಸಂಸತ್ ಭವನದ ಉದ್ಘಾಟನೆ ಕುರಿತು ಲೋಕಸಭೆಯ ಮಹಾಲೇಖಪಾಲರು ನೀಡಿರುವ ಆಹ್ವಾನ ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿದರು.ರಾಷ್ಟ್ರಪತಿಗಳು ದೇಶದ ಪ್ರಥಮ ಪ್ರಜೆ ಮತ್ತು ಸಂಸತ್ತಿನ ಸಂಸ್ಥೆಯ ಮುಖ್ಯಸ್ಥರು” ಎಂದು ಅದು ಗಮನಿಸಿದೆ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಉದ್ಘಾಟನೆಗೆ ಅನುಕೂಲವಾಗುವಂತೆ ಸುಪ್ರೀಂ ಕೋರ್ಟ್‌ನಿಂದ ನಿರ್ದೇಶನವನ್ನು ಕೋರಲಾಗಿತ್ತು. ಅದನ್ನು ಸುಪ್ರೀಂ ಕೋರ್ಟ್ ಮಜಾ ಗೊಳಿಸಿದೆ.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಹೊಸ ಕಟ್ಟಡವನ್ನು ಉದ್ಘಾಟಿಸುವಂತೆ ಆಹ್ವಾನಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ೨೦೨೦ ರಲ್ಲಿ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿದ್ದರು ಮತ್ತು ಹೆಚ್ಚಿನ ವಿರೋಧ ಪಕ್ಷಗಳು ಆಗಲೂ ಕಾರ್ಯಕ್ರಮದಿಂದ ದೂರವೇ ಉಳಿದಿದ್ದವು.